ಬಳ್ಳಾರಿ: ಜಿಲ್ಲೆಯ ಜಿಂದಾಲ್ ಕಾರ್ಖಾನೆ ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಒಟ್ಟು 2904 ವಲಸೆ ಕಾರ್ಮಿಕರು ಬಳ್ಳಾರಿ ಮತ್ತು ಹೊಸಪೇಟೆ ರೈಲು ನಿಲ್ದಾಣಗಳಿಂದ ಪ್ರತ್ಯೇಕ ಎರಡು ವಿಶೇಷ ಶ್ರಮಿಕ ರೈಲುಗಳಲ್ಲಿ ಭಾನುವಾರ ಪ್ರಯಾಣ ಬೆಳೆಸಿದರು. ಬಳ್ಳಾರಿಯಿಂದ 1452 ಮತ್ತು ಹೊಸಪೇಟೆಯಿಂದ 1452 ಯುಪಿ ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದರು.
ಬಳ್ಳಾರಿ ನಿಲ್ದಾಣದಲ್ಲಿ ಡಿಸಿ ಎಸ್.ಎಸ್. ನಕುಲ್, ಎಸ್ಪಿ ಸಿ.ಕೆ. ಬಾಬಾ, ಜಿಪಂ ಸಿಇಒ ಕೆ.ನಿತೀಶ್, ಹೆಚ್ಚುವರಿ ಎಸ್‌ಪಿ ಲಾವಣ್ಯ, ಪ್ರಭಾರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ, ಹೊಸಪೇಟೆ ರೈಲು ನಿಲ್ದಾಣದಲ್ಲಿ ಸಹಾಯಕ ಆಯುಕ್ತ ಶೇಖ್ ತನ್ವೀರ್ ಆಸೀಫ್, ತಹಶ್ರೀಲ್ದಾರ್ ವಿಶ್ವನಾಥ್, ಆಹಾರದ ಬ್ಯಾಗ್‌ಗಳನ್ನು ವಿತರಿಸಿ ಕಾರ್ಮಿಕರನ್ನು ಬೀಳ್ಕೊಟ್ಟರು.
ಈ ವಲಸೆ ಕಾರ್ಮಿಕರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ, ಅಲ್ಲಿಯೇ 835 ರೂ.ಗಳ ಟಿಕೆಟ್‌ನ್ನು ನೀಡಲಾಗಿತ್ತು. ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.
ಕಾರ್ಮಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬಿಸ್ಕತ್ ಪ್ಯಾಕೇಟ್, ಎರಡು ಬ್ರೆಡ್ ಪ್ಯಾಕ್, ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿರ್ಚಿ ಬಜ್ಜಿ ಹಾಗೂ ಇನ್ನಿತರ ಆಹಾರ ಸಾಮಗ್ರಿಗಳುಳ್ಳ ಕಿಟ್‌ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು. ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಯಿತು.
ರೆಡ್‌ಕ್ರಾಸ್ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್ಗಳನ್ನು ವಿತರಿಸಿದರು. ಉತ್ತರಪ್ರದೇಶದ ಆಗ್ರಾ, ಅಲಿಘರ್, ಅಜಂಘರ್, ಲಕ್ನೋ, ಅಲಹಾಬಾದ್, ಅಮೇಥಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು. ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಎಸ್ಪಿ ಸಿ.ಕೆ. ಬಾಬಾ, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಅವರು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದತೆಗಳನ್ನು ಪರಿಶೀಲಿಸಿದರು.
ಹೊಸಪೇಟೆಯಲ್ಲಿ ಸಹಾಯಕ ಆಯುಕ್ತ ಶೇಖ್ ತನ್ವೀರ್ ಅಸೀಫ್ ಹಾಗೂ ತಹಶೀಲ್ದಾರ್ ವಿಶ್ವನಾಥ ಅವರು ಬೆಳಗ್ಗೆಯಿಂದಲೇ ಖುದ್ದು ಸ್ಥಳದಲ್ಲಿ ಉಪಸ್ಥಿತರಿದ್ದು ವಲಸಿಗರನ್ನು ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಟ್ಟರು. ಉತ್ತರ ಪ್ರದೇಶಕ್ಕೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣವಾಗಲಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.