ಬೆಂಗಳೂರು: ಗಣಿಗಾರಿಕೆಯಿಂದ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಹಾಗೂ ಗಣಿಗಾರಿಕೆಯಿಂದ ತೊಂದರೆಗೊಳಗಾದ ಪ್ರದೇಶದ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅಧಿಕಾರಿ ಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಮತ್ತು ಕರ್ನಾಟಕ ಗಣಿ ಮತ್ತು ಪರಿಸರ ಪುನಶ್ಚೇತನ ನಿಗಮದ ಅಧ್ಯಕ್ಷರಾಗಿರುವ ವಂದಿತಾ ಶರ್ಮಾ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಸೇರಿ ನಿಗಮದ ಅಧಿಕಾರಿಗಳು ಗಣಿಗಾರಿಕೆಯಿಂದ ತೊಂದರೆಗೊಳಗಾಗಿರುವ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನ ಹಾಗೂ
ಸ್ಥಳೀಯವಾಗಿ ತೊಂದರೆ ಗೊಳಗಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು, ಗಣಿ ಕಾರ್ಮಿಕರ ಮಕ್ಕಳಿಗೆ ಶಾಲೆ, ರಸ್ತೆ ನಿರ್ಮಾಣ, ಕೌಶಲ್ಯ ತರಬೇತಿ ಸೇರಿದಂತೆ ಸರ್ಕಾರ ಕೈಗೆತ್ತಿಕೊಳ್ಳಲಿರುವ ಯೋಜನೆಗಳ ಕುರಿತು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ವರದಿ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವರಣೆ ನೀಡಿದ್ದಾರೆ.
ಗಣಿ ಬಾಧಿತ ಜಿಲ್ಲೆಗಳಲ್ಲಿ ಪರಿಸರ ಪುನಶ್ಚೇತನಕ್ಕೆ ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರ 24 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದೆ. ಆ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡರೆ, ರಾಜ್ಯ ಸರ್ಕಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ 2018 ರಲ್ಲಿಯೇ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದ್ದರೂ, ಇದುವರೆಗೂ ಒಪ್ಪಿಗೆ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವರದಿಯನ್ನು ಒಪ್ಪಿಕೊಂಡು ಅಭಿವೃದ್ದಿ ಕಾರ್ಯ ಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಕಳೆದ ತಿಂಗಳು ಮತ್ತೂಮ್ಮೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.