Advertisement

Waqf: ವಕ್ಫ್ ಆಸ್ತಿ ಒತ್ತುವರಿ ವರದಿಗೆ ಸಚಿವ ಜಮೀರ್‌ ಗಡುವು

10:39 PM Dec 28, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿ ಒಂದು ತಿಂಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಅಲ್ಪಸಂಖ್ಯಾಕರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್‌ ಅಹಮದ್‌ ಖಾನ್‌ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗಡುವು ನೀಡಿದರು.

Advertisement

ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯದಲ್ಲಿ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಜಿಲ್ಲಾವಾರು ವಕ್ಫ್ ಆಸ್ತಿಗಳ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸಹಿತ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯಕ್ಕೆ ಹಾಜರಾಗದೆ ಪರೋಕ್ಷವಾಗಿ ಒತ್ತುವರಿದಾರರ ಜತೆ ಶಾಮೀಲಾಗಿರುವ ಬಗ್ಗೆ ಮಾಹಿತಿ ಇದೆ. ಈ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ಕಠಿನ ಕ್ರಮ ಕೈಗೊಳ್ಳಲಾಗುವುದು. ಹಣ ಮಾಡಲು ಇಲ್ಲಿಗೆ ಬರಬಾರದು. ಆರೋಪ ಕೇಳಿಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತೀಕ್ಷ್ಣವಾಗಿ ಹೇಳಿದ ಸಚಿವರು, ವಕ್ಫ್ ಅಸ್ತಿಗಳ ರಕ್ಷಣೆಗೆ ಕಾಂಪೌಂಡ್‌ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಕ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕರೂಪದ ಕಾಂಪೌಂಡ್‌ ಹಾಕಬೇಕು ಎಂದರು.

ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದೂ ಎಚ್ಚರಿಸಿದ ಅವರು, ಪ್ರತಿ ಜಿಲ್ಲಾ ಹಾಗೂ ತಾಲೂಕುಗಳ ಸಮಗ್ರ ವರದಿ ಸಲ್ಲಿಸಲು ಒಂದು ತಿಂಗಳಲ್ಲಿ ಸಲ್ಲಿಸಬೇಕು ಎಂದರು.
ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌, ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್‌ ಬಾಷಾ, ನಿರ್ದೇಶಕ ಮೊಕಾಶಿ ಜಿಲಾನಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next