Advertisement

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ : ಸಚಿವ ಕೆ.ಎಸ್‌. ಈಶ್ವರಪ್ಪ

03:53 PM Aug 12, 2021 | Team Udayavani |

ಬೆಳಗಾವಿ: ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳು ತಮ್ಮ ಗ್ರಾಮಗಳನ್ನು ಕುಟುಂಬದಂತೆ ಭಾವಿಸಿ, ಅವುಗಳ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಬೇಕು. ಅದೇ ರೀತಿ ಅಧ್ಯಕ್ಷರು ತಮ್ಮನ್ನು ಗೆಲ್ಲಿಸಿರುವ ಜನರು ಸಂತೃಪ್ತಿಯಿಂದ ಜೀವನ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ನಗರದ ಗಾಂಧಿ ಭವನದಲ್ಲಿ ಬುಧವಾರ 75 ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮƒತ ಮಹೋತ್ಸವದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಸುಲಭದ ಮಾತಲ್ಲ. ಇಲ್ಲಿ ಜನರ ನಂಬಿಕೆ ಬಹಳ ಮುಖ್ಯ. ಐದು ವರ್ಷದ ಅಧಿಕಾರದ ಅವಧಿಯಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕು. ನಿಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ನರೇಗಾ ಯೋಜನೆಯ ಮೂಲಕ ಗ್ರಾಮಗಳಲ್ಲಿ ಉದ್ಯೋಗ ಅವಕಾಶ ಸೃಷ್ಟಿಸಿ, ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಅವರನ್ನು ತೊಡಗಿಸಬೇಕು. ವಲಸೆ ಬಂದಂತಹ ಜನರಿಗೂ ಸಹ ಅವಕಾಶ ಕಲ್ಪಿಸಿ, ಸ್ವಾವಲಂಬಿ ಜೀವನ ನಡೆಸುವಲ್ಲಿ ನರೇಗಾ ಯೋಜನೆ ಸಹಕಾರಿಯಾಗಿದೆ. ಮಳೆ ನೀರಿನ ಸಂಗ್ರಹ ಮಾಡಲು ಕ್ಯಾಚ್‌ ದಿ ರೈನ್‌ ಈ ಯೋಜನೆಯಲ್ಲಿ ಬದು, ಕೃಷಿ ಹೊಂಡಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿ, ತೆರೆದ ಬಾವಿಗಳ ನಿರ್ಮಾಣ ಮಾಡುವುದರೊಂದಿಗೆ ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದ ಅವರು, ಕರ್ನಾಟಕದಲ್ಲಿ 28,000 ಕ್ಕೂ ಹೆಚ್ಚು ಕೆರೆಗಳಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಕೆರೆಗಳ ಅಭಿವೃದ್ಧಿ ಗುರಿಯನ್ನು ತಲುಪಲಾಗುವುದು ಎಂದರು.

ಪುರಸಭೆ ಮಟ್ಟದಲ್ಲಿ ತರಬೇತಿ: ಮುಂದಿನ ದಿನಗಳಲ್ಲಿ ಪುರಸಭೆ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಿಗೆ ಯೋಜನೆಗಳ ಹಾಗೂ ಅವರ ಕರ್ತವ್ಯಗಳ ಕುರಿತು ತರಬೇತಿ ನೀಡಲಾಗುವುದು. ಪಂಚಾಯತ್‌ ಕಚೇರಿಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಬೇಕು. ವಿದ್ಯುತ್‌ ವ್ಯವಸ್ಥೆಯ ಮೇಲೆ ಅವಲಂಬಿತರಾಗದೇ, ಸೋಲಾರ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ಗ್ರಾಮದ ಪ್ರತಿ ಮನೆಯೂ ಶೌಚಾಲಯ ಹೊಂದಿರಬೇಕು ಎಂದು ಹೇಳಿದರು.

Advertisement

ವಿಧಾನ ಸಭಾ ಉಪಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಗ್ರಾಮದ ಸುತ್ತ ಮುತ್ತಲಿನ ಪರಿಸರ ಶುಚಿಯಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದ್ದು, ಹಳ್ಳಿಗಳಲ್ಲಿ ಕೆರೆಗಳ ನಿರ್ಮಾಣ, ಕಸ ವಿಲೇವಾರಿ ಹಾಗೂ ಶಾಲೆಗಳ ಅಭಿವೃದ್ಧಿಯಂತಹ ಕಾರ್ಯಗಳನ್ನು ಮಾಡುವುದರ ಮೂಲಕ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎಂದು ಹೇಳಿದರು. ದೇವಾಲಯಗಳ ಸುತ್ತಲೂ ಗೋಡೆಗಳ ನಿರ್ಮಾಣ ಹಾಗೂ ಸಮುದಾಯ ಭವನಗಳ ನಿರ್ಮಾಣವಾಗಬೇಕು. ರಸ್ತೆಗಳ ನಿರ್ಮಾಣಕ್ಕೆ ಅವಕಾಶ ನೀಡಬೇಕು ಹಾಗೂ ಶಾಲಾ ಕಟ್ಟಡಗಳ ನಿರ್ಮಾಣ, ದುರಸ್ತಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ವಿಧಾನ ಪರಿಷತ್‌ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಬೆಳಗಾವಿ ಅತಿ ದೊಡ್ಡ ಜಿಲ್ಲಾ ಪಂಚಾಯತ್‌ ಹೊಂದಿದ ಜಿಲ್ಲೆಯಾಗಿದ್ದು, ಹಳ್ಳಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಭಾಗ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಸದಸ್ಯರಿಗೆ ದೊರಕಿದೆ. ಐದು ವರ್ಷಗಳ ಅವಧಿಯಲ್ಲಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೀವೆಲ್ಲರೂ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.

ಪರಿಸರವಾದಿ ಶಿವಾನಂದ ಕಳವೆ ಮಾತನಾಡಿ, ರಾಜ್ಯದಲ್ಲಿ 39,000 ಕೆರೆಗಳಿವೆ. ಈ ಕೆರೆಗಳ ನಿರ್ವಹಣೆಯ ಜವಾಬ್ದಾರಿಯನ್ನು ಗ್ರಾಮ ಪಂಚಾಯತಿಗಳಿಗೆ ನೀಡಲಾಗಿದೆ. ಮಳೆಯ ನೀರಿನ ಸಂಗ್ರಹಣೆ ಮಾಡಬೇಕು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್‌ ಸಿಇಒ ದರ್ಶನ್‌ ಎಚ್‌.ವಿ ಸ್ವಾಗತಿಸಿ, ಘನ ತ್ಯಾಜ್ಯ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆ, ನರೇಗಾ ಯೋಜನೆ, ಜಲ ಜೀವನ್‌ ಮಿಷನ್‌ ಯೋಜನೆಗಳ ಪ್ರಗತಿಯನ್ನು ವಿವರಿಸಿದರು. ಇದೇ ವೇಳೆ, ಹಾವೇರಿ ಜಿಲ್ಲೆಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಗ್ರಾಮ ಚರಿತ್ರೆ ಕೋಶವನ್ನು ಬಿಡುಗಡೆಗೊಳಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next