ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ ಆರೋಪ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರ ರಕ್ಷಣೆಯನ್ನೂ ಮಾಡಬಾರದು. ಕೇವಲ ಮೌಖಿಕವಾಗಿ ತನಿಖೆ ಮಾಡುತ್ತೇವೆ, ಸತ್ಯಾಂಶ ತಿಳಿಯುತ್ತೇವೆ ಎಂದು ಕಾಲಹರಣ ಮಾಡಬಾರದು. ಕೂಡಲೇ ಎಫ್ಐಆರ್ ದಾಖಲಿಸಿ, ಈಶ್ವರಪ್ಪರನ್ನು ಬಂಧಿಸಬೇಕು. ಈ ಹಿಂದೆ ಸಚಿವರುಗಳ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದ್ದು, ಈ ಪ್ರಕರಣದಲ್ಲಿ ಆ ರೀತಿ ಮಾಡಬಾರದು ಎಂದು ಆಗ್ರಹಿಸಿದರು.
ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಅನೇಕ ಸಚಿವರುಗಳ ರಾಜೀನಾಮೆ ಪಡೆಯಲಾಗಿದೆ. ಈಗಲೂ ಆರೋಪ ಹೊತ್ತಿರುವ ಸಚಿವನ ವಿರುದ್ದ ಪ್ರಕರಣ ದಾಖಲಿಸಿ, ಆತನನ್ನು ವಜಾಗೊಳಿಸಬೇಕು, ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.