ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ಮಾಹಿತಿಯನ್ನು ಪ್ರತಿದಿನ ವೆಬ್ ಸೈಟ್ ಮೂಲಕ ಜನರಿಗೆ ನೀಡಬೇಕು. ಆಕ್ಸಿಜನ್, ರೆಮ್‌ಡಿಸಿವಿಯರ್ ಮೊದಲಾದ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಜೊತೆ ಮಂಗಳವಾರ ಝೂಮ್ ಮೂಲಕ ಸಭೆ ನಡೆಸಿದ ಅವರು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು ಎಂದರು.
ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ಸಂಗ್ರಹ, ದೆ„ನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು. ಅದೇ ರೀತಿ ರೆಮ್‌ಡಿಸಿವಿಯರ್ ಲಭ್ಯತೆ ಬಗ್ಗೆ ನಿಗಾ ವಹಿಸುವುದಲ್ಲದೆ ಅದು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ರೆಮ್‌ಡಿಸಿವಿಯರ್ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಆಸ್ಪತ್ರೆಗಳಿಗೆ ನೋಟಿಸ್ ನೀಡಬೇಕು. ಆದರೆ ಸೇವಾಶುಲ್ಕ ಮಾತ್ರ ಪಡೆಯಲು ಅವಕಾಶವನ್ನು ಕಲ್ಪಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಲಭ್ಯವಿರುವ ವೆಂಟಿಲೇಟರ್ ಸೌಲಭ್ಯ ಸಮರ್ಪಕ ಬಳಕೆಗೆ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು ಎಂದರು. ಕೋವಿಡ್ ಹೆಚ್ಚಾಗಿ ಹರಡುತ್ತಿರುವ ಗ್ರಾಮಗಳಲ್ಲಿ ಯಾವ ಕಾರಣಕ್ಕಾಗಿ ಹರಡುತ್ತಿದೆ ಎಂಬುದನ್ನು ಪತ್ತೆಹಚ್ಚಲು ಗ್ರಾಮಗಳಲ್ಲಿ ಕಾರ್ಯಪಡೆಗಳನ್ನು ಕಡ್ಡಾಯವಾಗಿ ರಚನೆ ಮಾಡಿ, ನಿಯಂತ್ರಿಸಲು ಕ್ರಮ ಜರುಗಿಸಬೇಕು. ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಸಲಹಾ ಸಮಿತಿ ರಚಿಸಬೇಕು ಎಂದು ಸಲಹೆ ನೀಡಿದರು.