ಗದಗ: ಸೂಟ್‌ಕೇಸ್, ಬ್ಯಾಗ್ ನೀಡುವುದು ಜೆಡಿಎಸ್ ನಲ್ಲಿರಬಹುದು. ಆದರೆ ಅಂತಹ ಸಂಸ್ಕೃತಿ ಬಿಜೆಪಿಯಲ್ಲಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯಕ್ಕೆ ಪದೇ ಪದೆ ಭೇಟಿ ನೀಡುತ್ತಿದ್ದಾರೆ. ಅವರು ಬ್ಯಾಗ್, ಸೂಟ್ ಕೇಸ್‌ಗಳಲ್ಲಿ ಹಣ ಕೊಂಡೊಯ್ಯಲು ಬರುತ್ತಾರೆಂಬುದು ನಿರಾಧಾರ. ಸೂಟ್‌ಕೇಸ್ ಪದ್ಧತಿ ಕುಮಾರಸ್ವಾಮಿ ಅವರ ಪಕ್ಷದಲ್ಲಿರಬಹುದು. ನಮ್ಮಲ್ಲಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಆಡಳಿತವನ್ನು ಹೊಗಳುತ್ತಾರೆ. ನಮ್ಮ ಆಡಳಿತವನ್ನು ಸಮರ್ಥಿಸುತ್ತಾರೆ. ನಮ್ಮ ಸಂಘಟನೆಯನ್ನು ಸ್ವಾಗತಿಸುತ್ತಾರೆಂಬ ಭ್ರಮೆಯಲ್ಲಿ ನಾವಿಲ್ಲ. ಅವರ ಅನಾರೋಗ್ಯಕರ ಟೀಕೆಗೆ ಸೂಕ್ತ ವೇದಿಕೆಯಲ್ಲಿ ಉತ್ತರಿಸಲಾಗುವುದು ಎಂದರು.
ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ವಿತರಣೆಯಲ್ಲಿ ವಿಳಂಬವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶನಿವಾರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ತ್ವರಿತಗತಿಯಲ್ಲಿ ಪ್ರೋತ್ಸಾಹಧನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.
ಕೋವಿಡ್ ಸೋಂಕು ನಿವಾರಣೆ ಹಾಗೂ ಗಣೇಶ ಚತುರ್ಥಿ ಆಚರಣೆಕುರಿತು ಸಿಎಂ ಅಧಿಕಾರಗಳೊಂದಿಗೆ ಚರ್ಚಿಸಿದ್ದಾರೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಅನ್ವಯ ಗಣೇಶೋತ್ಸವ ಆಚರಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಯೋಜನೆಗಳಿಗೆ ಅನುದಾನ ಬಿಡುಗಡೆ ತಡವಾಗಿದೆ ಎಂಬ ದೂರುಗಳಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಸತಿ ನಿಲಯಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುವುದು ಎಂದರು.