ಬೆಂಗಳೂರು: ರಾಜ್ಯದಲ್ಲಿ 100 ತಾಲೂಕುಗಳು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ 2,434 ಕೋಟಿ ರೂ. ಪರಿಹಾರ ನೀಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಕೃಷಿ ಸಚಿವ ಶಿವಶಂಕರರೆಡ್ಡಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್ ಅವರನ್ನು ಭೇಟಿ ಮಾಡಿದ ಸಚಿವರು, 100 ತಾಲೂಕುಗಳಲ್ಲಿ ಬರ ಆವರಿಸಿದ್ದು 16,662 ಕೋಟಿ ರೂ. ನಷ್ಟವಾಗಿದೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲೂಕುಗಳಲ್ಲಿ ಮೂಲಸೌಕರ್ಯಕ್ಕಾಗಿ ಹಣ ಬಿಡುಗಡೆ ಮಾಡಿದ್ದು ಕೇಂದ್ರದಿಂದ ನೆರವು ನೀಡಬೇಕೆಂದು ಕೋರಿದರು. ಬರದಿಂದ 26.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿ 1743.89 ಕೋಟಿ ರೂ. ಅಂದಾಜು ಮಾಡಲಾಗಿದೆ. ಅದೇ ರೀತಿ 1.94 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟವಾಗಿ 1368.11 ಕೋಟಿ ರೂ. ನಷ್ಟದ ಅಂದಾಜು ಮಾಡಲಾಗಿದೆ. 212.94 ಕೋಟಿ ರೂ. ಗೋಶಾಲೆ, 175.20 ಕೋಟಿ ರೂ. ಮೇವು ಬ್ಯಾಂಕ್, 72 ಕೋಟಿ ರೂ. ಕುಡಿಯುವ ನೀರು ಪೂರೈಕೆಗೆ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ವಿ.ದೇಶಪಾಂಡೆ, ರಾಜ್ಯದಲ್ಲಿ ಬರ ಹಾಗೂ ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿ 2,434 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕೇಂದ್ರದ
ಅಧ್ಯಯನ ತಂಡ ಕಳುಹಿಸಲು ಮನವಿ ಮಾಡಿದ್ದೇವೆ ಎಂದು ಹೇಳಿದರು. ರಾಜ್ಯ ಸರ್ಕಾರದಿಂದ ಪ್ರತಿ ತಾಲೂಕಿಗೆ 50 ಲಕ್ಷ ರೂ. ನಂತೆ 50 ಕೋಟಿ ರೂ. ವೆಚ್ಚ ಮಾಡಿರುವುದು ಸೇರಿ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾಮಗಾರಿಗಳ ಮಾಹಿತಿಯನ್ನೂ ಕೇಂದ್ರ ಸಚಿವರಿಗೆ ನೀಡಿದ್ದೇವೆ ಎಂದು ತಿಳಿಸಿದರು.