ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರಕಾರ ವಿಶೇಷ ಗಮನ ಹರಿಸಿದೆ. ಕೇರಳ ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿಭಾಗದ 23 ಕಡೆಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಸರಕಾರ ಕ್ರಮಕೈಗೊಂಡಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ರವಿವಾರ ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಅಪರಾಧಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಜನರು ಸರಕಾರದ ಜತೆ ಸಹಕರಿಸಬೇಕು ಎಂದರು.
ಪ್ರವೀಣ್ ಹತ್ಯೆ ಉದ್ದೇಶಪೂರ್ವಕವಾಗಿ ನಡೆದ ಕೃತ್ಯ. ಪಿಎಫ್‌ಐ, ಎಸ್‌ಡಿಪಿಐ ಪಿತೂರಿಯಿಂದ ಕೃತ್ಯ ನಡೆದಿದೆ. ಇದರಲ್ಲಿ ರಾಜಕೀಯ ಇಲ್ಲ ಎಂದ ಅವರು ಘಟನೆಯಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಇದೆಯಾ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ. ತಪ್ಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಘಟನೆ ಮರುಕಳುಹಿಸದಂತೆ ಕ್ರಮ ವಹಿಸಲು ಮುಖ್ಯಮಂತ್ರಿಗಳ ಜತೆ ಈಗಾಗಲೇ ಚರ್ಚಿಸಿದ್ದೇನೆ. ಮುಂದೆ ಶೀಘ್ರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾಗುವ ಮೂಲಭೂತ ಬೇಡಿಕೆಗಳ ಬಗ್ಗೆ ಸಿಎಂಗೂ ತಿಳಿಸಿ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.
ಸರಕಾರ ಇಂತಹ ಘಟನೆ ಮರುಕಳುಹಿಸದಂತೆ ಎರಡು ದಿನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ರಾಜ್ಯಗಳಿಗೆ ಕಾನೂನು ಕಾಪಾಡಲು ಯಾವ ಯೋಜನೆ ರೂಪಿಸಬೇಕೆಂಬ ಬಗ್ಗೆ ಕೇಂದ್ರ ಸರಕಾರ ಕ್ರಮಕೈಗೊಂಡು ರಾಜ್ಯಗಳಿಗೆ ಸೂಚಿಸುವ ಕೆಲಸವಾಗಬೇಕಿದೆ ಎಂದರು.