Advertisement

ಕೋವಿಡ್19: ಮೈಸೂರು ವಿಭಾಗದ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಸಚಿವ ಸೋಮಶೇಖರ್ ಚಾಲನೆ

01:20 PM Oct 02, 2020 | keerthan |

ಮೈಸೂರು: ಕೋವಿಡ್ 19 ರ ಅಂಗವಾಗಿ ಮೈಸೂರು ವಿಭಾಗದಲ್ಲಿ ಆರ್ಥಿಕ ಸ್ಪಂದನಕ್ಕೆ ಇಂದು ಸಹಕಾರ ಇಲಾಖೆ ಮೂಲಕ ಚಾಲನೆ ನೀಡುತ್ತಿದ್ದೇವೆ. ಇದರ ವ್ಯಾಪ್ತಿಗೆ ಎಂಟು ಜಿಲ್ಲೆಗಳು ಬರಲಿದ್ದು, ರೈತರು, ಸಣ್ಣ ರೈತರು, ಉದ್ದಿಮೆದಾರರು, ವ್ಯಾಪಾರಸ್ಥರು ಹೀಗೆ ಹಲವು ವಿಭಾಗಗಳಲ್ಲಿ ಸಾಲ ನೀಡಲಾಗುತ್ತದೆ. ಇದಕ್ಕೋಸ್ಕರ 8600 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ಕೊಡಲಾಗಿದೆ. ಒಟ್ಟು ನಾಲ್ಕು ವಿಭಾಗಗಳ ಮೂಲಕ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರನ್ನು ಬೃಹತ್ ಮಹಾನಗರ ಪಾಲಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಇಲ್ಲಿನ ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಸೇರಿಸಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. 8 ಗ್ರಾಮ ಪಂಚಾಯಿತಿಗಳಿಗೆ ಅರ್ಹತೆ ಇದೆ. ಜನಸಂಖ್ಯೆ ಆಧಾರದ ಮೇಲೆ ಮಹಾನಗರ ಪಾಲಿಕೆಯಾಗಿ ಪರಿವರ್ತಿಸಬೇಕೇ ಎಂಬ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಶಿರಾ, ಆರ್‌.ಆರ್‌. ನಗರ: ಬಿಜೆಪಿ – ಜೆಡಿಎಸ್‌ ನಡುವೆ ಒಳ ಒಪ್ಪಂದ ಸಾಧ್ಯತೆ

ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಇದು ಸರ್ಕಾರದ ನಿರ್ಧಾರವಾಗಿದ್ದು, ನಾವು ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಈಗಿನ ಜಿಲ್ಲಾಧಿಕಾರಿಗಳೂ ಸಹ ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಕನ್ನಡಿಗರೇ ಬೇಕು ಎಂದು ಐಎಎಸ್ ಅಧಿಕಾರಿಗಳ ವಿಷಯದಲ್ಲಿ ಹೇಳಲಾಗದು ಎಂದು ಸಚಿವರಾದ ಸೋಮಶೇಖರ್ ಹೇಳಿದರು.

Advertisement

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ನಾವು ಮನವಿ ಮಾಡಿದ್ದೇವೆ. ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಎರಡು ಅಭ್ಯರ್ಥಿಗಳ ಹೆಸರು ಕೇಳಿಬರುವುದು ಸಹಜ. ಹಿಂದಿನ ಪರಾಜಿತ ಅಭ್ಯರ್ಥಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಪಕ್ಷದಲ್ಲಿ ತೀರ್ಮಾನವಾಗುತ್ತದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next