ಬೆಂಗಳೂರು: ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಅವರು, ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವೂ ಪ್ರಧಾನವಾದ ಕ್ಷೇತ್ರವಾಗಿದೆ. ಸರ್ಕಾರ ವಿಧಿಸಿದ ಲಾಕ್ ಡೌನ್ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದ ಕಾರಣ, ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ ಆಸಕ್ತಿ ತೋರಲಿಲ್ಲ. ಇದೂ ಕೂಡಾ ಬಹು ವಿಧದ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಯಿತು ಎಂದಿದ್ದಾರೆ.
ಇದನ್ನೂ ಓದಿ:ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ
ಖಾಸಗಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ. ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿದ್ದಾರೆ, ಹಣ್ಣು ತರಕಾರಿ ಮಾರಿದ್ದಾರೆ. ಇದನ್ನು ನಾವು ಹಲವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕೇಳಿದ್ದೇವೆ. ಅವರ ನೆರವಿಗೆ ಧಾವಿಸುವುದೂ ಸಹ ಸರ್ಕಾರದ ಜವಾಬ್ದಾರಿಯಾಗಿದೆ.
ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ, ಬಜೆಟ್ ಅನುದಾನರಹಿತ ಶಾಲೆ ಕಾಲೇಜುಗಳಲ್ಲಿ ಕೆಲಸ ಮಾಡುವ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ತಾವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಈ ಸಮುದಾಯಕ್ಕೆ ವಿಶ್ವಾಸ ತುಂಬಬೇಕೆಂದು ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲೂ ಕಠಿಣ ಲಾಕ್ ಡೌನ್ ನಿಯಮ ಜಾರಿ: ಡಿಸಿ ಡಾ. ಸೆಲ್ವಮಣಿ