ಮಾಸ್ತಿ: ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು, ತಾಲೂಕಿನ ಅಭಿವೃದ್ಧಿಗಾಗಿ ಅಧಿಕಾರಿ ವರ್ಗಗಳ ಬದಲಾವಣೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಮಾಸ್ತಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಮಾಸ್ತಿ, ತುರುಣಿಸಿ ಹಾಗೂ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುವ ಸಮಯದಲ್ಲಿ ಬಡವರು ಸಾಮಾನ್ಯ ವರ್ಗದವರಿಗೆ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಕೇವಲ ದಲ್ಲಾಳಿಗಳ ದರ್ಬಾರ ಆಗಿತ್ತು. ಈಗ ರಾಜ್ಯದಲ್ಲಿ ಮತ್ತು ತಾಲೂಕಿನಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಹಕಾರ ನೀಡಿದಂತಹ ಅಧಿಕಾರಿಗಳನ್ನು ಬೇರೆ ಕಡೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ಹಂತ, ಹಂತವಾಗಿ ಗ್ಯಾರಂಟಿ ಜಾರಿಗೆ: ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲಾ ಜಾತಿ ಧರ್ಮಗಳವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಅವಧಿಯಲ್ಲಿ ಹಗರಣಗಳನ್ನು ಮಾಡಿದ್ದರಿಂದ ವಿಧಾನಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆಯುತ್ತದೆ. ನುಡಿದಂತೆ ನಡೆಯುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷವಾಗಿದ್ದು, ಕೊಟ್ಟಂತ 5 ಗ್ಯಾರಂಟಿಗಳಲ್ಲಿ ಹಂತ ಹಂತವಾಗಿ ಎಲ್ಲಾ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ತಾಲೂಕಿನಲ್ಲೂ ಸಹ ಅಭಿವೃದ್ಧಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಅಧಿಕಾರಿ ವರ್ಗಗಳ ಬದಲಾವಣೆ ಮಾಡಲಾಗುತ್ತಿದೆ. ತಾಲೂಕಿನ 28 ಗ್ರಾಮ ಪಂಚಾಯಿತಿ ಎಲ್ಲಾ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯಾಗ ಬೇಕಾಗಿರುವುದರಿಂದ ತಾಲೂಕಿಗೆ ರಾಜ್ಯದಿಂದ ವಿಶೇಷ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡಲಾಗುವುದು. ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮೂಲಭೂತ ಸೌಕರ್ಯಗಳಾದ ರಸ್ತೆ ಚರಂಡಿ ವಿದ್ಯುತ್ ದೀಪ, ಕುಡಿಯುವ ನೀರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತೆ ನೋಡಿ ಕೊಳ್ಳಬೇಕು ಎಂದು ಎಂದು ತಿಳಿಸಿದರು.
ಮಾಸ್ತಿ ಅಭಿವೃದ್ಧಿಗೆ ವಿಶೇಷ ಅನುದಾನ: ನನ್ನ ಗೆಲುವಿಗೆ ಲೀಡ್ ನೀಡಿ ಸಹಕಾರ ನೀಡಿದ ಮಾಸ್ತಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕಳೆದ ಆಡಳಿತದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ ನಿರ್ಮಾಣಕ್ಕೆ 25 ಕೋಟಿ ರೂ. ಬಿಡುಗಡೆ, ಕೆಪಿಎಸ್ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ 5 ಕೋಟಿ ರೂ. ಬಿಡುಗಡೆ ಮಾಡಿಸಿರು ವುದು ಸೇರಿದಂತೆ ಹಲವಾರು ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ. ಮುಂದಿನ ದಿನಗಳಲ್ಲೂ ಸಹ ಮಾಸ್ತಿಗೆ ವಿಶೇಷ ಅನುದಾನ ತಂದು ಮಾದರಿ ಯಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು.
ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ನರಸಿಂಹ, ಡಿಸಿಸಿ ಬ್ಯಾಂಕ್ ನಿರ್ದೇಶಕ ಚನ್ನರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಚ್.ಕೃಷ್ಣಕುಮಾರ್, ಮಾಜಿ ಸದಸ್ಯ ಸರಾªರ್ ಬೇಗ್, ತಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಶೇಖ್ ಇಮ್ರಾನ್, ಮಾಜಿ ಅಧ್ಯಕ್ಷರಾದ ಮೋಹನ್ ರಾವ್, ಜೆಸಿಬಿ ನಾಗರಾಜ್, ಶೌಕತ್, ಭಾಸ್ಕರ್‌ಗೌಡ, ಹಾಲು ಡೇರಿ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಸೇವಾ ಸಹಕಾರ ಸಂಘದ ಅಧ್ಯಕ್ಷ ಜಿ.ಸಿ.ನಾರಾಯಣಸ್ವಾಮಿ, ಕೆಪಿಎಸ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಂ ಪಾಷ, ಅಮರನಾರಾಯಣ, ಚೇತನ್‌ಕುಮಾರ್, ಕೆ.ಎನ್. ಮುನಿಯಪ್ಪ, ಮುನಿಸ್ವಾಮಿಗೌಡ, ರಾಜ್‌ಕುಮಾರ್ ಸೇರಿದಂತೆ ಮಾಸ್ತಿ, ತುರುಣಿಸಿ ಹಾಗೂ ಹಸಾಂಡಹಳ್ಳಿ ಗ್ರಾಪಂನ ಸದಸ್ಯರು, ಮುಖಂಡರು ಹಾಜರಿದ್ದರು.