ವಿಜಯಪುರ: ಮಂತ್ರಿ ಮಂಡಲ ವಿಸ್ತರಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮೂವರು ಶಾಸಕರನ್ನು ಹೊಂದಿರುವ ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ನೀಡಿಕೆಯಲ್ಲಿ ಆದ್ಯತೆ ನೀಡಬೇಕು ಎಂದು ದೇವರಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಆಗ್ರಹಿಸಿದ್ದಾರೆ.
ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಮೊದಲ ಬಾರಿ ಶಾಸಕನಾಗಿದ್ದು, ರಾಜಕೀಯದಲ್ಲಿ ಕಿರಿಯ ಎಂದಾದರೆ, ಹಿರಿತನ ಹೊಂದಿರುವ ಜಿಲ್ಲೆಯ ಇನ್ನಿಬ್ಬರು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ ನಡಹಳ್ಳಿ ಅವರಿಗಾದರೂ ಅವಕಾಶ ನೀಡಿ ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮೊದಲ ಬಾರಿಗೆ ನಾನು ಶಾಸಕನಾಗಿದ್ದರೂ ನಮ್ಮ ತಂದೆ ಹಲವು ಬಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ದಕ್ಷ ಆಡಳಿತವನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಹೀಗಾಗಿ ಒಂದೊಮ್ಮೆ ಯುವಕರಿಗೆ ಆದ್ಯತೆ ನೀಡಲು ಹೈಕಮಾಂಡ ನನಗೆ ಸಚಿವ ಸ್ಥಾನದ ಅವಕಾಶ ನೀಡಿದಲ್ಲಿ ನಾನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.
ಇದನ್ನೂ ಓದಿ:ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ: ಎನ್.ಮಹೇಶ್
ಇನ್ನು ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಪಕ್ಷದ ಯಾವುದೇ ಹಿರಿಯ ನಾಯಕರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ, ಹೀಗಾಗಿ ನಾನು ಯತ್ನಾಳ ಅವರ ಯಾವುದೇ ಹೇಳಿಕೆಗೆ ಪ್ರತಿಕ್ರಿಯಿಸಲಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಯತ್ನಾಳ ಅವರು ಸಿ.ಎಂ. ವಿರುದ್ಧ ಹರಿಹಾಯುತ್ತಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು