ಹಾಸನ: ಶಾಸಕ ಪ್ರೀತಂ ಜೆ.ಗೌಡ ಅವರು ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 1.75 ಕೋಟಿ ರೂ. ವೆಚ್ಚದ ಕಾಮಗಾರಿ ಗಳಿಗೆ ರಸ್ತೆ ಅಭಿವೃದ್ಧಿ ಹಾಗೂ ಅಂಬೇಡ್ಕರ್ ಭವನ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಅಂಬೇಡ್ಕರ್ ಭವನ ಕಾಮಗಾರಿಗೆ ಚಾಲನೆ: ಸಾಲಗಾಮೆ ಹೋಬಳಿ ಉಗನೆ ಕೊಪ್ಪಲು ಗ್ರಾಮದಲ್ಲಿ 20 ಲಕ್ಷ ರೂ. ಅಂದಾಜಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಬೈಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮೇನಹಳ್ಳಿ ಗ್ರಾಮದಲ್ಲಿ 12 ಲಕ್ಷ ರೂ. ಅಂದಾಜಿನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಅಗಲಹಳ್ಳಿ ಗ್ರಾಮದಲ್ಲಿ 40 ಲಕ್ಷ ರೂ. ಅಂದಾಜಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ರಸ್ತೆ ಅಭಿವೃದ್ಧಿಗೆ ಚಾಲನೆ: ಬೈಲಹಳ್ಳಿ ಗ್ರಾಮದಲ್ಲಿ ಅಂದಾಜು 50 ಲಕ್ಷ ರೂ. ವೆಚ್ಚದ ರಸ್ತೆ ಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಹಾಸನ ತಾಲೂಕು ಕಸಬಾ ಹೋಬಳಿ ಕಂದಲಿ ಗ್ರಾಮದಲ್ಲಿ 25 ಲಕ್ಷ ರೂ. ಅಂದಾಜಿನ ರಸ್ತೆ ಅಭಿವೃದ್ಧಿಗೆ ಹಾಗೂ ಅಣಚಿಹಳ್ಳಿಯ ರಸ್ತೆ ಅಭಿವೃದ್ಧಿಗೆ 25 ಲಕ್ಷ ರೂ. ಅಂದಾಜಿನ ಕಾಮಗಾರಿಗೂ ಚಾಲನೆ ನೀಡಿದರು.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾಮಗಾರಿ: ಸಮ್ಮಿಶ್ರ ಸರ್ಕಾರದ 14 ತಿಂಗಳ ಅವಧಿಯಲ್ಲಿ ಮೌನಕ್ಕೆ ಶರಣಾಗಿದ್ದ ಶಾಸಕ ಪ್ರೀತಂ ಜೆ.ಗೌಡ ಅವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿಯೇ ಸ್ವಕ್ಷೇತ್ರದಲ್ಲಿ ಚುರುಕಾಗಿ ಓಡಾಡುತ್ತಾ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ.
ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿ ಕಾಮ ಗಾರಿಗಳಿಗೆ ಮಾತ್ರ ಚಾಲನೆ ನೀಡುತ್ತಿರುವ ಶಾಸಕ ಪ್ರೀತಂ ಜೆ. ಗೌಡ ಅವರು, ಹಾಸನ ನಗರಕ್ಕೆ ರೇವಣ್ಣ ಅವರು ಸಚಿವರಾಗಿದ್ದಾಗ ಮಂಜೂರಾಗಿದ್ದ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಬಗ್ಗೆ ಅಷ್ಟಾಗಿ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪಗಳು ಜಿಲ್ಲೆಯ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.