ಬೆಂಗಳೂರು: ಅಫಜಲ್‌ಪುರ ಶಾಸಕ ಮಾಲಿಕಯ್ಯ ಗುತ್ತೆದಾರ ಕಾಂಗ್ರೆಸ್ ತೊರೆದ ಬೆನ್ನಲ್ಲೇ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮತ್ತಷ್ಟು ಶಾಸಕರು ಪಕ್ಷ ತೊರೆಯುವ ಸಾಧ್ಯತೆಗಳನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅತೃಪ್ತರ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದವರು, ಸಚಿವ ಸ್ಥಾನ ಕಳೆದುಕೊಂಡವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದರಿಂದ ಬಿಜೆಪಿ ನಾಯಕರು ಅಂತಹ ನಾಯಕರನ್ನು ಬಿಜೆಪಿ ಸೆಳೆಯಲು ಪ್ರಯತ್ನ ನಡೆಸಿದೆ.
ಹೀಗಾಗಿ ಕೊನೆ ಗಳಿಗೆಯಲ್ಲಿ ವಲಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನಿಸಿಕೊಂಡವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ದೂರವಾಣಿ ಮೂಲಕ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷವಾಗಿ ಯಾದಗಿರಿ ಶಾಸಕ ಮಾಜಿ ಸಚಿವ ಎ.ಬಿ. ಮಾಲಕರೆಡ್ಡಿ ಮಲ್ಲಿಕಾರ್ಜುನ ಖರ್ಗೆ ಮೇಲಿನ ಮುನಿಸಿನಿಂದ ಕಾಂಗ್ರೆಸ್‌ನಿಂದ ದೂರ ಉಳಿಯುವುದಾಗಿ ಹೇಳಿದ್ದರು. ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ನಿರಂತರ ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಕರೆಡ್ಡಿ ಅವರನ್ನು ಪಕ್ಷದಲ್ಲಿಯೇ ಉಳಿಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಅದೇ ರೀತಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಕೂಡ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಇರುವವರೆಗೂ ತಮಗೆ ಕಾಂಗ್ರೆಸ್‌ನಲ್ಲಿ ಅಧಿಕಾರ ಸಿಗುವುದಿಲ್ಲ ಎಂದು ಭಾವಿಸಿರುವ ಅವರು, ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಬಾರಿ ಸಚಿವ ಸ್ಥಾನ ನೀಡುವ ಭರವಸೆ ನೀಡಿ, ಅವರನ್ನೂ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಗುರುಮಿಟ್ಕಲ್ ಶಾಸಕ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನೂ ಪಕ್ಷಕ್ಕೆ ಸೆಳೆಯಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಗುರುಮಿಟ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಿಪಾಲ್ ರೆಡ್ಡಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚಿಂಚನಸೂರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.