ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ನಿರ್ವಹಣೆ ಅವಲೋಕನ ಕುರಿತಂತೆ ಚರ್ಚಿಸಲು ಮೇ 21ರಂದು ಕರೆಯಲಾಗಿದ್ದ ರಾಜ್ಯ ಬಿಜೆಪಿ ಸಂಸದರು, ಶಾಸಕರು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರ ಸಭೆ ದಿಢೀರ್ ಮುಂದೂಡಿಕೆಯಾಗಿದೆ.
ಈ ಸಂಬಂಧ ಶನಿವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯದಲ್ಲಿ ಕಾಣಿಸಿಕೊಂಡಿರುವ ಬರ ಹಾಗೂ ಅದಕ್ಕೆ ಸಂಬಂಧಪಟ್ಟಂತೆ ವರದಿ ಸಂಗ್ರಹಿಸುವಂತೆ ಸೂಚಿಸಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಬಿಜೆಪಿ ಸಂಸದರು, ಶಾಸಕರು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರು.
ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಬೆಂಗಳೂರಿನಲ್ಲಿ ಮೇ 21ಕ್ಕೆ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದರು. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿದೆ. ಸದ್ಯದಲ್ಲೇ ಬರ ನಿರ್ವಹಣೆ ಅವಲೋಕನಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಸಭೆಯ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಾಗೂ ಕುಂದಗೋಳ, ಚಿಂಚೋಳಿ ವಿಧಾನಸಭೆ ಉಪಚುನಾವಣೆ ಫಲಿತಾಂಶ ಮೇ 23ರಂದು ಪ್ರಕಟವಾಗಲಿದ್ದು, ಅದಕ್ಕೂ ಮೊದಲೇ ಮೇ 21ರಂದು ರಾಜ್ಯದ ಬಿಜೆಪಿ ಸಂಸದರು, ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಸಭೆಯನ್ನು ಯಡಿಯೂರಪ್ಪ ಅವರು ಕರೆದಿದ್ದು, ತೀವ್ರ ಕುತೂಹಲ ಕೆರಳಿಸಿತ್ತು.
ಫಲಿತಾಂಶ ಪ್ರಕಟವಾದ ನಂತರದ ಬೆಳವಣಿಗೆ ಕುರಿತಂತೆ ಕೆಲ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಮೂಡಿಸಿತ್ತು. ಆದರೆ, ಸಭೆಯನ್ನು ದಿಢೀರ್ ಮುಂದೂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಗಳ ಫಲಿತಾಂಶ ಮೇ 23ಕ್ಕೆ ಪ್ರಕಟವಾಗಲಿದ್ದು, ಬಳಿಕ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳಲ್ಲಿ ಪೂರ್ವಭಾವಿಯಾಗಿ ಕೆಲ ಸಿದ್ಧತೆಗಳು ನಡೆಯಬೇಕಿವೆ.
ಜಿಲ್ಲಾಧ್ಯಕ್ಷರು ಸೇರಿದಂತೆ ಶಾಸಕರು ಕೂಡ ಇದಕ್ಕೆ ಸಂಬಂಧಪಟ್ಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಇಂತಹ ಸಂದರ್ಭದಲ್ಲಿ ಸಭೆ ಆಯೋಜಿಸುವುದು ಸೂಕ್ತವಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಲ್ಲದೆ, ತರಾತುರಿಯಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಮತ್ತೆ ತೆರಳಬೇಕಾಗುತ್ತದೆ ಎಂದು ಕೆಲವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.