ಬೆಂಗಳೂರು: ಸಿಬಿಐ ನಿರ್ದೇಶಕರ ಬದಲಾವಣೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನ ಸಿಬಿಐ ಕಚೇರಿ ಎದುರು ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆಗಮಿಸಿದರೂ ನಗರದ ಶಾಸಕರು ಗೈರು ಹಾಜರಾಗಿದ್ದು ಕಾಟಾಚಾರದ ಪ್ರತಿಭಟನೆಗೆ ಸಾಕ್ಷಿಯಾಯಿತು.
ಗಂಗಾನಗರ ಸಿಬಿಐ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗ ಪಡೆಸಿಕೊಳ್ಳಲು ಅಲೋಕ್ ವರ್ಮಾ ಅವರನ್ನು ರಜೆಯ ಮೇಲೆ ಕಳುಹಿಸಿ ರಫೆಲ್ ಯುದ್ಧ ವಿಮಾನ ಖರೀದಿ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನಕ್ಕೆ ಕೈ ಹಾಕಿದೆ ಎಂದು ಕಾಂಗ್ರೆಸ್ ದೇಶಾದ್ಯಂತ ರುವ ಸಿಬಿಐ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು.
ಅದರಂತೆ ಬೆಂಗಳೂರಿನ ಸಿಬಿಐ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಲು ಐಎಸಿಸಿ ಸೂಚನೆ ನೀಡಿತ್ತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರಿಂದ ಪ್ರತಿಭಟನೆಯಿಂದ ದೂರ ಉಳಿದಿದ್ದರು.
ಎಐಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೊರತು ಪಡೆಸಿ ನಗರದ ಯಾವ ಶಾಸಕರೂ ಭಾಗವಹಿಸಿರಲಿಲ್ಲ. ಈ ವೇಳೆ ಮಾತನಾಡಿದ ಕೆ.ಸಿ.ವೇಣುಗೋಪಾಲ್, ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ನಿಷ್ಕ್ರಿàಯಗೊಳಿಸಿದ್ದು, ಇದರ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ರಾತ್ರೋ ರಾತ್ರಿ ಸಿಬಿಐ ಅಧಿಕಾರಿಗಳನ್ನು ರಜೆಯ ಮೇಲೆ ಕಳುಹಿಸಿ ಮೂರನೇ ಸ್ಥಾನದಲ್ಲಿರುವ ಅಧಿಕಾರಿಗೆ ಹಂಗಾಮಿ ನಿರ್ದೇಶಕರ ಸ್ಥಾನ ನಿಡಲಾಗಿದೆ. ಒಂದೇ ರಾತ್ರಿಯಲ್ಲಿ ಹತ್ತು ಜನ ಸಿಬಿಐ ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಸಿಬಿಐ ಇತಿಹಾಸದಲ್ಲಿಯೇ ನಡೆದಿಲ್ಲ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿಬಿಐ ಸಂಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.
ಸಿಬಿಐ ಸ್ವಾಯತ್ತ ಸಂಸ್ಥೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಅಲ್ಲದೇ ಈ ವಿಷಯವನ್ನು ಜನರ ಬಳಿಯೂ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಕಾರ್ಯಕರ್ತರು ಸಿಬಿಐ ಕಚೇರಿಗೆ ಮುತ್ತಿಗೆ ಹಾಕುವುದನ್ನು ಪೊಲಿಸರು ತಡೆದಿದ್ದರಿಂದ ಹೆಬ್ಟಾಳ ಮುಖ್ಯ ರಸ್ತೆಯಲ್ಲಿಯೇ ಸುಮಾರು ಹದಿನೈದು ನಿಮಿಷ ಪ್ರತಿಭಟನೆ ನಡೆಸಿದರು.