ಮಂಡ್ಯ: ಸ್ಥಳೀಯ ಸಂಸ್ಥೆಗಳಿoದ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಬೂಕಳ್ಳಿ ಮಂಜು ಹೇಳಿದರು.
ಕಳೆದ 10 ತಿಂಗಳಿನಿoದಲೇ ಚುನಾವಣೆಗೆ ಸಿದ್ಧತೆ ನಡೆಸಿದ್ದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರನ್ನು ಖುದ್ದಾಗಿ ಮೂರು ಬಾರಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಅರಿತಿದ್ದೇನೆ. ಅಲ್ಲದೆ, ಅವರ ವಿಶ್ವಾಸ ಗಳಿಸಿರುವುದರಿಂದ ಚುನಾವಣೆ ಗೆಲುವು ಸುಲಭವಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ನನ್ನ ತಂದೆ 15 ವರ್ಷ ಗಂಜಿಗೆರೆ ಗ್ರಾಪಂ ಛರ‍್ಮನ್ ಆಗಿ ಕೆಲಸ ನಿರ್ವಹಿಸಿದ್ದಾರೆ. ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ನನ್ನ ಸೇವೆಯನ್ನು ಗುರುತಿಸಿ ರಾಜ್ಯ ಹಾಗೂ ಕೇಂದ್ರದ ವರಿಷ್ಠರು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು.
ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರಲಿಲ್ಲ. ಆ ಸಂದರ್ಭವೇ ಬೇರೆ ಇತ್ತು. ಈಗ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲವರ್ಧನೆಯಾಗಿದೆ. ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಶಾಸಕರನ್ನು ಆಯ್ಕೆ ಮಾಡಿದ್ದೇವೆ. ಸಂದರ್ಭ ಬದಲಾಗಿದ್ದು, ಈ ಚುನಾವಣೆಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.
ಸ್ಥಳೀಯ ವಿಧಾನ ಪರಿಷತ್ ಚುನಾವಣೆ ಎಂದರೆ ಕೇವಲ ಹಣ ಬಲ ಮುಖ್ಯ ಎನ್ನುವ ಮಾತು ಸುಳ್ಳು. ನಾನು ಗ್ರಾಮ ಪಂಚಾಯಿತಿ ಸದಸ್ಯರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿ, ಅವರ ಕಷ್ಟಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಅವರ ವಿಶ್ವಾಸವೇ ನನ್ನ ಕೈಹಿಡಿಯಲಿದೆ. ನಾನು ಗೆದ್ದರೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿಧಾನಸೌಧದಲ್ಲಿ ಗೌರವ ಸಿಗುವಂತೆ ಮಾಡಲಾಗುವುದು. ಯಾವುದೇ ಸದಸ್ಯರು ನೇರವಾಗಿ ವಿಧಾನಸೌಧ ಪ್ರವೇಶಿಸುವಂತೆ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಈಗಾಗಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ನಾಮಪತ್ರ ಸಲ್ಲಿಕೆಗೆ ಅವರನ್ನು ಆಹ್ವಾನಿಸಿದಾಗ ವಿಜಯೇಂದ್ರ ಅವರಿಗೆ ಭಾಗವಹಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಸಂಸದೆ ಸುಮಲತಾಅಂಬರೀಷ್ ಅವರ ಗೆಲುವಿಗೆ ನಮ್ಮ ಪಕ್ಷದ ಕೊಡುಗೆ ಅಪಾರವಾಗಿದೆ. ಆದ್ದರಿಂದ ನಮಗೆ ಬೆಂಬಲ ನೀಡುವಂತೆ ಶೀಘ್ರದಲ್ಲಿಯೇ ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್, ಮಾಜಿ ಅಧ್ಯಕ್ಷ ಎಚ್.ಪಿ.ಮಹೇಶ್, ಕಾಡೇನಹಳ್ಳಿ ಕೆ.ನಾಗಣ್ಣಗೌಡ ಇದ್ದರು.