ರಾಯಚೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಬೆಲೆ 60 ರೂ. ಇತ್ತು. ರೈಲ್ವೆ ಪ್ಲಾಟ್‌ಫಾರಂ ದರ 2 ರೂ.ತೊಗರಿಬೇಳೆ ಕೆಜಿಗೆ 55 ರೂ. ಹಾಗೂ ಅಡುಗೆ ಅನಿಲ 370 ರೂ. ಇತ್ತು. ಆದರೆ, ಇಂದು ದೇಶದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಬೆಲೆ 73 ರೂ. ಏರಿಕೆಯಾಗಿದ್ದರೆ, ಬೇಳೆ 100 ರೂ. ಆಗಿದೆ. ಅಡುಗೆ ಅನಿಲದ ಬೆಲೆ 700 ರೂ. ತಲುಪಿದ್ದು, ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ. ಇದರಿಂದ ಬಡ ಜನರು ಜೀವನ ನಡೆಸುವುದೇ ಕಷ್ಟ ಎನ್ನುವಂಥ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದರು.
ಕೆಪಿಸಿಸಿ ಉಪಾಧ್ಯಕ್ಷ ಎನ್.ಎಸ್.ಬೋಸರಾಜ್, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮಾಜಿ ಶಾಸಕ ರಾಜರಾಯಪ್ಪ ನಾಯಕ, ಜಿ.ಶಿವಮೂರ್ತಿ, ಬಸವರಾಜರೆಡ್ಡಿ, ಕೆ.ಶಾಂತಪ್ಪ, ನರಸನಗೌಡ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣಿ, ಎಚ್.ಬಿ.ಮುರಾರಿ, ಎಸ್.ಮಾರೆಪ್ಪ, ತಾಯಣ್ಣ ನಾಯಕ ಸೇರಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.