ಸಾಗರ: ಕೇಂದ್ರದ ಬಿಜೆಪಿ ಸರ್ಕಾರ ರೈತಪರವಲ್ಲ. ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ರೈತಪರವಾದ ಯಾವುದೇ ಪರಿಣಾಮಕಾರಿ ಯೋಜನೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿಲ್ಲ ಎಂದು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್ ದೂರಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ತಕ್ಷಣ ಸ್ವಾಮಿನಾಥನ್ ವರದಿಯನ್ನು ನೀಡಲಾಗಿತ್ತು. ಅಂದಿನಿಂದ ಇಂದಿನವರೆಗೂ ವರದಿ ಜಾರಿಗೆ ತರದೆ ಮೋದಿ ರೈತ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದರು.
ಬಿಜೆಪಿ ಖಾಸಗಿಕರಣಕ್ಕೆ ರೆಡ್‌ಕಾರ್ಪೇಟ್ ಹಾಕಿ ಸ್ವಾಗತಿಸುತ್ತಿದೆ. ಎಲ್‌ಐಸಿ, ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರ ಯಾರ ಜೊತೆಯೂ ಚರ್ಚೆ ಮಾಡದೆ ಕಾಯ್ದೆಗಳನ್ನು ಜಾರಿಗೆ ತರುತ್ತದೆ. ರೈತರು ಒಂದು ವರ್ಷದ ಕಾಲ ರೈತವಿರೋಧಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ೭೫೦ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಸರ್ಕಾರ ಮೃತ ರೈತಕುಟುಂಬಗಳಿಗೆ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಕಾಯ್ದೆ ಹಿಂದಕ್ಕೆ ಪಡೆದಿದ್ದೇವೆ ಎಂದು ಹೇಳುತ್ತಿದೆ. ಆದರೆ ಕಾಯ್ದೆ ಬಗ್ಗೆ ಈತನಕ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ರಾಜ್ಯದ ೧೫ ಜಿಲ್ಲೆಗಳು ಅಡಿಕೆ ಆರ್ಥಿಕತೆಯನ್ನು ಅವಲಂಬಿಸಿ ಅಭಿವೃದ್ಧಿ ಹೊಂದುತ್ತಿದೆ. ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ. ಕೇಂದ್ರ ಸರ್ಕಾರ ಇದಕ್ಕೆ ಅಫಿಡವಿಟ್ ಸಲ್ಲಿಸುವ ಕೆಲಸ ಮಾಡಿಲ್ಲ. ಕಾಗೋಡು ತಿಮ್ಮಪ್ಪ ಅವರು ಆರೋಗ್ಯ ಸಚಿವರಾಗಿದ್ದಾಗ ಅಡಿಕೆ ಕುರಿತು ವೈಜ್ಞಾನಿಕ ಪ್ರಯೋಗ ನಡೆಸಿ ಅಡಿಕೆ ಆರೋಗ್ಯಕ್ಕೆ ಹಾನಿಕಾರವಲ್ಲ ಎನ್ನುವ ವರದಿ ತರಿಸಿದ್ದಾರೆ. ಅಡಿಕೆ ಪೂಜನೀಯ ಮತ್ತು ಔಷಧಿ ಗುಣವುಳ್ಳ ವಸ್ತುವಾಗಿದೆ. ಹಿಂದಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ನಡೆಸಿ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಸುವ ಭರವಸೆ ಬಿಜೆಪಿ ನೀಡಿದ್ದು ಹುಸಿಯಾಗಿದೆ ಎಂದು ಆರೋಪಿಸಿದರು.
ಪ್ರಸ್ತುತ ಕಾಂಗ್ರೆಸ್ ಮತ್ತು ಬಿಜೆಪಿ ಒಂದು ನಾಣ್ಯದ ಎರಡು ಮುಖದಂತಾಗಿದೆ. ಕೇಂದ್ರದ ದುರಾಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಯಾವುದೇ ಪರಿಣಾಮಕಾರಿ ಹೋರಾಟ ನಡೆಸುತ್ತಿಲ್ಲ. ಬಿಜೆಪಿ ಬಂಡವಾಳಶಾಹಿ ಪಕ್ಷವಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಸಂಪೂರ್ಣ ಸಹಕಾರವಿದೆ. ಕೇಂದ್ರ ಸರ್ಕಾರ ರೈತರ ಬೇಡಿಕೆ ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ದೂಗೂರು ಪರಮೇಶ್ವರ, ರಾಮಪ್ಪ ಶಿರವಾಳ, ನೂರುಲ್ಲಾ, ಪ್ರಭಾಕರ್ ಹಾಜರಿದ್ದರು.