ಹೊಸದಿಲ್ಲಿ: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಬಣ ಬಹುಮತ ಪಡೆದಿದ್ದು, ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಅನುಮೋದಿಸಿದೆ. ರವಿವಾರ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಅವರು ಇಂದು ಬೆಳಗ್ಗೆ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಮತ್ತು ದೆಹಲಿಯ ಸದೈವ್ ಅಟಲ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುದ್ಧ ಸ್ಮಾರಕದಲ್ಲಿ ಮೋದಿಯವರಿಗೆ ಸಾಥ್ ನೀಡಿದರು.
ರಾಷ್ಟ್ರಪತಿ ಭವನದಲ್ಲಿ ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಮತ್ತು ಅವರ ಮಂತ್ರಿ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ಬಂದಿದೆ. ಆದರೆ ಇಂಡಿಯಾ ಬ್ಲಾಕ್ ಸದಸ್ಯರೊಂದಿಗೆ ಸಮಾಲೋಚಿಸಿದ ನಂತರ ಸಮಾರಂಭದಲ್ಲಿ ಭಾಗವಹಿಸುವ ಎಂದು ಖರ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಹಲವು ಗಣ್ಯರು ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.