ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಾಗ್ಗೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದ್ದು ಆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಜ.11ರಿಂದ ಕಾಂಗ್ರೆಸ್ ನಾಯಕರ ರಾಜ್ಯ ಪ್ರವಾಸ ಆರಂಭವಾಗಲಿದೆ. ಪ್ರವಾಸದ ವೇಳೆ ರಾಜ್ಯದ ಎಲ್ಲ ವರ್ಗದ ಜನರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರದ ಅನ್ಯಾಯಗಳನ್ನು ತಿಳಿಸಲಾಗುವುದು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಆಳ್ವಿಕೆ ಅಂತ್ಯವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರ ತನಿಖೆ ನಡೆಸಲಿ: ಶಾಸಕ ಲಿಂಬಾವಳಿ ಅವರ ಹೆಸರು ಬರೆದಿಟ್ಟು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದಲ್ಲಿ ಶಾಸಕರ ಹೆಸರು ಪ್ರಸ್ತಾಪವಾಗಿದ್ದು, ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು. ಪ್ರಕರಣ ಸಂಬಂಧ ಸರ್ಕಾರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ನಂದಿನಿ ಹಾಗೂ ಅಮೂಲ್ ವಿಲೀನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಅಮಿತ್ ಶಾ ಅವರು, ಸಾರ್ವಜನಿಕ ವೇದಿಕೆಯಲ್ಲಿ ನೀಡಿರುವ ಹೇಳಿಕೆ ಬಹಿರಂಗವಾಗಿದೆ. ನಾವು ಇದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಈ ವಿಚಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜ್ಯಗಳ ವಿಚಾರವೇ ಹೊರತು ರಾಷ್ಟ್ರೀಯ ವಿಚಾರವಲ್ಲ ಎಂದು ತಿರುಗೇಟು ನೀಡಿದರು.