ಮಂಗಳೂರು: ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರನ್ನು ತನ್ನ ಪಕ್ಕದಲ್ಲಿ ಕುಳ್ಳಿರಿಸಿ, ಅವರಿಗೆ ಟಿಕೆಟನ್ನೂ ಕೊಡಿಸಿ, ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುತ್ತಾ ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಪುದುಚೇರಿ ಮುಖ್ಯಮಂತ್ರಿ ವೇಲು ನಾರಾಯಣಸ್ವಾಮಿ ಹೇಳಿದರು.
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶ್ರೀರಾಮುಲು ಅವರನ್ನೇ ಡಿಸಿಎಂ ಎನ್ನುವ ಬಿಜೆಪಿಯವರ ಮನಃಸ್ಥಿತಿ ಹೇಗಿರಬಹುದು ಎಂಬುದನ್ನು ಜನ ಅರ್ಥ ಮಾಡಿ ಕೊಳ್ಳಲಿದ್ದಾರೆ ಎಂದರು.
ಬಿಜೆಪಿ ಅಧಿಕಾರದಲ್ಲಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಬ್ಬ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಜೈಲಿಗೆ ಹೋಗಿದ್ದರು. ಅಂಥವರಿಗೆ ಮತ್ತೆ ಟಿಕೆಟ್ ನೀಡುವ ಮೂಲಕ ಪ್ರಧಾನಿ ಮೋದಿ ಭ್ರಷ್ಟಾಚಾರಕ್ಕೆ ಬೆಂಗಾವಲಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಸಮಯ ಸಾಧಕರು. ಅವರಲ್ಲಿ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಆರೋಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ವರ್ಷಗಳಲ್ಲಿ ಶೇ. 98 ಭರವಸೆ ಪೂರೈಸಿ ಮಹತ್ವದ ಸಾಧನೆ ಮಾಡಿದೆ. ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು, ಶೇ. 24 ವಿದೇಶಿ ಬಂಡವಾಳ ಹೂಡಿಕೆ ಕರ್ನಾಟಕದಲ್ಲಿ ನಡೆದಿದೆ. ರೈತರ ಕಲ್ಯಾಣ, ಸಾಮಾಜಿಕ ಭದ್ರತಾ ಕಾರ್ಯಕ್ರಮದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಸುರೇಶ್ ಶೆಟ್ಟಿ, ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.