Advertisement

ರಕ್ತಹೀನತೆ ಸಮಸ್ಯೆ ನಿವಾರಣೆಗೆ ಶ್ರಮಿಸಿ

05:45 PM Sep 11, 2019 | Naveen |

ಮೊಳಕಾಲ್ಮೂರು: ತಾಲೂಕಿನಲ್ಲಿ ಮಕ್ಕಳು ಮತ್ತು ಹೆಣ್ಣುಮಕ್ಕಳಲ್ಲಿ ಕಂಡುಬರುವ ರಕ್ತಹೀನತೆಯನ್ನು ಹೋಗಲಾಡಿಸಲು ಶ್ರಮಿಸಬೇಕಿದೆ ಎಂದು ಶಿರಸ್ತೇದಾರ ಟಿ. ನಾಗರಾಜ್‌ ಹೇಳಿದರು.

Advertisement

ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಅಂತರ್‌ ಇಲಾಖಾ ಸಮನ್ವಯ ಸಮಿತಿ ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪೋಷಣ್‌ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಮತ್ತು ಮಹಿಳೆಯರಲ್ಲಿ ರಕ್ತಹೀನತೆಯನ್ನು ತಡೆಗಟ್ಟುವುದು ಅಭಿಯಾನದ ಮುಖ್ಯ ಉದ್ದೇಶ. 6 ವರ್ಷದೊಳಗಿನ ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು ಹಾಗೂ 15 ರಿಂದ 49 ವರ್ಷದ ಮಹಿಳೆಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ನೀಡಿ ರಕ್ತಹೀನತೆ ಸಮಸ್ಯೆ ಇಲ್ಲದಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಹೆಣ್ಣುಮಕ್ಕಳು ಮತ್ತು ಮಕ್ಕಳಿಗೆ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ತಾಲೂಕಿನ ಎಲ್ಲಾ ಗ್ರಾಮಗಳ ಆರೋಗ್ಯ ಕೇಂದ್ರಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರು ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ದಿನಾಚರಣೆಗಳಲ್ಲಿ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸಿ ಅತಿಸಾರ ಭೇದಿಯನ್ನು ತಡೆಗಟ್ಟಬೇಕಾಗಿದೆ. ಮಕ್ಕಳು ಕೈತೊಳೆಯುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಅತಿಸಾರ ಭೇದಿಯಾಗುತ್ತಿರುವ ಮಕ್ಕಳಿಗೆ ಒಆರ್‌ಎಸ್‌ ಮತ್ತು ಜಿಂಕ್‌ ನೀಡುವಿಕೆ ಬಗ್ಗೆ ಅರಿವು ಮೂಡಿಸಲಾಗುವುದು. ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು ನವಜಾತ ಶಿಶುವಿನ ಆರೈಕೆಗಾಗಿ ಮನೆ ಮನೆಗೆ ಭೇಟಿ ನೀಡಿ ಬಾಣಂತಿ ಮತ್ತು ನವಜಾತು ಶಿಶುವಿನ ಬಗ್ಗೆ ಮಾಹಿತಿ ನೀಡಬೇಕು. ಆಗ ರಕ್ತಹೀನತೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಕೊಳಚೆ ಪ್ರದೇಶ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಪೂರ್ಣ ಪ್ರಮಾಣದ ಲಸಿಕೆ ನೀಡಲಾಗುವುದೆಂದು ತಿಳಿಸಿದರು.

ಬಿಇಒ ಎನ್‌. ಸೋಮಶೇಖರ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೋಪಾಲಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಟಿ. ಗುರುಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಖರ್‌, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ವ್ಯವಸ್ಥಾಪಕ ಪ್ರೇಮನಾಥ, ಡಾ| ಮಧುಕುಮಾರ್‌, ಡಾ| ಗೋವಿಂದರಾಜು, ಡಾ| ಟಿ.ಕೆ. ರಾಘವೇಂದ್ರಬಾಬು, ಬಿಪಿಎಂನ ನವೀನ್‌, ಆಶಾ ಮೇಲ್ವಿಚಾರಕಿ ಉಷಾ, ಸಿಬ್ಬಂದಿಗಳಾದ ಶಿವಮ್ಮ, ಸವಿತಾ ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next