ನವದೆಹಲಿ: ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ರವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ.
ಇದೇ ವರ್ಷ ಅಂಬಾನಿ ನಿವಾಸದ ಬಳಿ ಬಾಂಬ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಇನ್ನಿತರ ಪ್ರಕರಣಗಳಲ್ಲಿ ಮುಂಬೈನ ಮಾಜಿ ಪೊಲೀಸ್ ಕಮೀಷನರ್ ಪರಮ್‌ಬೀರ್ ಸಿಂಗ್ ಅವರು, ದೇಶ್‌ಮುಖ್ ವಿರುದ್ಧ ಲಂಚದ ಆರೋಪ ಮಾಡಿದ್ದರು. ಈ ಕುರಿತಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಪತ್ರವನ್ನೂ ಬರೆದಿದ್ದ ಸಿಂಗ್, ಪ್ರತಿ ತಿಂಗಳು 100 ಕೋಟಿ ರೂ.ಗಳನ್ನು ವಸೂಲಿ ಮಾಡಿಕೊಡುವಂತೆ ಅನಿಲ್ ಅವರು ತಮಗೆ ಸೂಚಿಸಿದ್ದಾಗಿ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ, ಜಾರಿ ನಿರ್ದೇಶನಾಲಯದ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ, ಇದರ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದ ದೇಶ್‌ಮುಖ್, ಸಮನ್ಸ್ ರದ್ದುಗೊಳಿಸುವಂತೆ ಕೋರಿದ್ದರು. ಆದರೆ, ನ್ಯಾಯಾಲಯ ಇವರ ಮನವಿಯನ್ನು ತಳ್ಳಿಹಾಕಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅವರ ವಿಚಾರಣೆ ನಡೆಸಿ, ಮಂಗಳವಾರ ಅವರನ್ನು ಬಂಧಿಸಿದೆ.
ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಅನಿಲ್ ದೇಶ್‌ಮುಖ್ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸ್ಪಷ್ಟನೆಯುಳ್ಳ ವಿಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ.
ದುರುದ್ದೇಶಪೂರಿತ: ನವಾಬ್ :
ಈ ನಡುವೆ, ದೇಶ್‌ಮುಖ್‌ರವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, ಇದೊಂದು ರಾಜಕೀಯ ದುರುದ್ದೇಶದ ನಡೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಮಸಿ ಬಳಿಯಲೆಂದೇ ಅವರ ಮೇಲೆ ಆರೋಪ ಹೊರಿಸಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.