ಶಿವಮೊಗ್ಗ: ವಿಷ ಪೂರಿತ ಆಹಾರ ಸೇವಿಸಿ ಗಾಜನೂರಿನ ಮೊರಾರ್ಜಿ ವಸತಿ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ತೀವ್ರವಾಗಿ ಅಸ್ವಸ್ಥರಾದ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರನ್ನು ಮಕ್ಕಳ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿಯವರೆಗೆ ಓದುವ ಸುಮಾರು 300 ವಿದ್ಯಾರ್ಥಿಗಳಿದ್ದಾರೆ. ಭಾನುವಾರ
ರಾತ್ರಿ 8 ಗಂಟೆ ಸುಮಾರಿಗೆ ಎಂದಿನಂತೆ ವಿದ್ಯಾರ್ಥಿಗಳು ಊಟ ಮಾಡಿದ್ದಾರೆ. 9 ಗಂಟೆಯ ವೇಳೆಗೆ ಕೆಲ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಹಲವರು ವಾಂತಿ ಮಾಡಿಕೊಂಡು, ಹೊಟ್ಟೆ ನೋವಿನಿಂದ ಒದ್ದಾಡಲಾರಂಭಿಸಿದ್ದಾರೆ. ತಕ್ಷಣವೇ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ವಿಷಪೂರಿತ ಆಹಾರ ಸೇವನೆ ಮುಖ್ಯ ಕಾರಣವೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಹಾಸ್ಟೆಲ್‌ನಲ್ಲಿ ಭಾನುವಾರ ರಾತ್ರಿಯ ಊಟಕ್ಕೆ ಅನ್ನ, ತಿಳಿಸಾರು, ಅಂಬಲಿ ಮಾಡಲಾಗಿತ್ತು ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಭಾನುವಾರ ರಾತ್ರಿಯೇ ಉಪ ವಿಭಾಗಾಧಿಕಾರಿ ಎಚ್.ಕೆ.
ಕೃಷ್ಣಮೂರ್ತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿಯಿತ್ತು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಸೋಮವಾರ ಬೆಳಗ್ಗೆ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಡಾ| ಎಂ. ಲೋಕೇಶ್, ಜಿಪಂ ಸಿಇಒ ಡಾ| ಕೆ.ರಾಕೇಶ್‌ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಕುರಿತು ಮಾಹಿತಿ ಪಡೆದರು.
ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯರನ್ನು ಮಕ್ಕಳ ವಿಭಾಗದಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಎಲ್ಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಿಮ್ಸ್ ಡೀನ್ ಡಾ| ಸುಶೀಲ್ ಕುಮಾರ್ ತಿಳಿಸಿದ್ದಾರೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹಾಸ್ಟೆಲ್‌ಗೆ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಲಾಗುವುದು. ಮೇಲ್ನೋಟಕ್ಕೆ ವಿದ್ಯಾರ್ಥಿನಿಯರ ಅಸ್ವಸ್ಥತೆಗೆ ಆಹಾರದಲ್ಲಿನ ಲೋಪದೋಷ ಕಾರಣವೆಂದು ಕಂಡುಬರುತ್ತಿದೆಯಾದರೂ ಸದ್ಯಕ್ಕೆ ಅಧಿಕೃತವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.