ಬೆಂಗಳೂರು : ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ ಸೋಮವಾರ 1,99,553 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 55.018 ಹಾಜರಿ) ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 51.95 ಹಾಜರಾತಿ) ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಸೋಮವಾರ 4,71,823 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಶಾಲಾಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದರು.
ಇದನ್ನೂ ಓದಿ:ತನ್ನ ಊರಿನ ಸಮಸ್ಯೆ ಹೇಳಲು ಬಂದ ಗ್ರಾ.ಪಂ.ಸದಸ್ಯನನ್ನು ವೇದಿಕೆಯಿಂದ ಕೆಳಗಿಳಿಸಿದ ಸಿದ್ದರಾಮಯ್ಯ
ವಿದ್ಯಾಗಮ ತರಗತಿಗಳೂ ಸಹ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಹೆಚ್ಚಿನ ಮಕ್ಕಳು ಹಾಜರಾಗುತ್ತಿದ್ದಾರೆ. ಪೋಷಕರು ಮತ್ತು ಮಕ್ಕಳು ಶಾಲಾರಂಭದ ಕುರಿತು ಸಂತಸ ವ್ಯಕ್ತಪಡಿಸಿದ್ದಾರಲ್ಲದೇ, ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ವಿಶ್ವಾಸ ಹೊಂದಿದ್ದಾರೆ. ಬಹುದಿನಗಳ ಕಾಲ ಶಾಲೆಗಳು ಆರಂಭವಾಗದೇ ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಒಂದು ಖಾಸಗಿ ಶಾಲೆಯ ಒಬ್ಬೊಬ್ಬ ಶಿಕ್ಷಕರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಮತ್ತು ಕಳಸಾ ತಾಲೂಕಿನ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಶಾಲೆಗಳನ್ನು ಮುಂದಿನ ಸೋಮವಾರದಿಂದ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.