Advertisement

ವರುಣನ ಆರ್ಭಟ ; ಕರಾವಳಿ ಪ್ರದೇಶದಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ?

05:57 PM Oct 04, 2018 | Team Udayavani |

ಬೆಂಗಳೂರು/ಉಡುಪಿ: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುರುವಾರ ಸಂಜೆಯಿಂದ ಮಳೆ ಆರಂಭಗೊಂಡಿದೆ. ಅಷ್ಟೇ ಅಲ್ಲ ಕರಾವಳಿ ಜಿಲ್ಲೆಗಳಲ್ಲಿನ ಸಮುದ್ರ ಪ್ರದೇಶದಲ್ಲಿ ಚಂಡಮಾರುತ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.

Advertisement

ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿಯೂ ಧಾರಾಕಾರ ಮಳೆ ಸುರಿದಿತ್ತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಂಜೆ 4ಗಂಟೆ ಸುಮಾರಿಗೆ ದಟ್ಟ ಕತ್ತಲೆ ಆವರಿಸಿತ್ತು. ಬಳಿಕ ಧಾರಾಕಾರ ಮಳೆ ಸುರಿದಿತ್ತು. ಮಂಗಳೂರು ಕಡಲ ತೀರ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಅಲ್ಲದೇ ನಾಳೆಯಿಂದ ಅ.10ರವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಮೀನುಗಾರಿಕೆ ಹಾಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ಟೋಬರ್ 5ರೊಳಗೆ ಮೀನುಗಾರರು ತೀರ ಪ್ರದೇಶಕ್ಕೆ ಮರಳುವಂತೆ ಹಾಗೂ ಅಕ್ಟೋಬರ್ 10ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಮಲ್ಪೆ ಬಂದರಿನಲ್ಲಿ ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next