ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ನಗರವು ಜಲಾವೃತವಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.
ವಿದೇಶ ಪ್ರವಾಸದಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. “ದೆಹಲಿಗೆ ಆಗಮಿಸಿದ ತಕ್ಷಣ, ಪ್ರಧಾನಿ ಮೋದಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರೊಂದಿಗೆ ಪ್ರವಾಹದಂತಹ ಪರಿಸ್ಥಿತಿಯನ್ನು ತಗ್ಗಿಸುವಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ಮಾತನಾಡಿದರು” ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ:U.T.Khader; ಸ್ಪೀಕರ್ ಯು.ಟಿ. ಖಾದರ್ ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ
ನೆರೆಯ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ ದೆಹಲಿಯು ಕಳೆದ ಕೆಲವು ದಿನಗಳಿಂದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ದೆಹಲಿಯ ಪ್ರಮುಖ ಮತ್ತು ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಳೆ ಪೀಡಿತ ಪ್ರದೇಶಗಳ ನಿವಾಸಿಗಳು ಮನೆಯೊಳಗೆ ಇರುವಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ.
ಯಮುನಾ ಬ್ಯಾರೇಜ್‌ನ ಎಲ್ಲಾ ಐದು ಗೇಟ್‌ಗಳನ್ನು ತೆರೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಅವುಗಳಲ್ಲಿ ಕೆಲವು ಹೂಳು ತುಂಬಿದೆ.
ಯಮುನಾ ನದಿಯಲ್ಲಿ ನೀರಿನ ಮಟ್ಟ ಇಳಿಮುಖವಾಗಿದೆ, ಮಳೆ ಬಾರದಿದ್ದರೆ ಪರಿಸ್ಥಿತಿ ಶೀಘ್ರದಲ್ಲೇ ಸಾಮಾನ್ಯವಾಗಲಿದೆ, ಮಳೆಯಾದರೆ ಸ್ವಲ್ಪ ಸಮಯ ಹಿಡಿಯಬಹುದು ಎಂದು ಅವರು ಹೇಳಿದರು.