ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.
ಅಲ್ಲದೆ, ಕರ್ನಾಟಕ ಉಸ್ತುವಾರಿಯ ಜವಾಬ್ದಾರಿಯನ್ನೂ ಮುಂದುವರೆಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯ ದರ್ಶಿಯಾಗಿದ್ದ ಅಶೋಕ್ ಗೆಲ್ಹೋಟ್ ಅವರು ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಅವರನ್ನು ರಾಷ್ಟ್ರಮಟ್ಟದ ಹುದ್ದೆಯಿಂದ ಕೈ ಬಿಡಲಾಗಿದ್ದು, ಅವರ ಸ್ಥಾನಕ್ಕೆ ಕೆ.ಸಿ.ವೇಣುಗೋಪಾಲ್ ಅವರನ್ನು ನೇಮಿಸಲಾಗಿದೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹುದ್ದೆ ಕಾಂಗ್ರೆಸ್ ಹೈಕಮಾಂಡ್‌ಗೆ ಅತ್ಯಂತ ಹತ್ತಿರದ ಹುದ್ದೆಯಾಗಿದೆ. ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ಉಸ್ತುವಾರಿ ಯಾಗಿ ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ ಪಕ್ಷದಲ್ಲಿನ ಗುಂಪುಗಾರಿಕೆಯನ್ನು ನಿಯಂತ್ರಿಸುವುದರ ಜೊತೆಗೆ ಎಷ್ಟೇ ದೊಡ್ಡವರಿದ್ದರೂ ಪಕ್ಷದ ಆದೇಶ ಪಾಲಿಸಬೇಕೆಂಬ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದರು. ಅಲ್ಲದೆ, ರಾಜ್ಯದಲ್ಲಿ ಯಾವುದೇ ಗುಂಪಿನ ಜೊತೆಗೆ ನೇರವಾಗಿ ಗುರುತಿಸಿಕೊಳ್ಳದೆ ಎಲ್ಲ ನಾಯಕರೊಂದಿಗೂ ಉತ್ತಮ ಸಂಬಂಧ ಮತ್ತು ಅಷ್ಟೇ ಅಂತರವನ್ನು ಕಾಯ್ದುಕೊಂಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದಿದ್ದ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡದೆ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಸಮಾಲೋಚನೆ ನಡೆಸಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರದಲ್ಲಿ ಪಾಲುದಾರ ಪಕ್ಷವಾಗಿ ಮುಂದುವರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ, ಕೆ.ಸಿ.ವೇಣುಗೋಪಾಲ್ ಅವರು ಹೈ ಕಮಾಂಡ್ ಮಟ್ಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು, ಈಗ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಳ್ಳಲು ಕಾರಣವಾಗಿದೆ ಎಂದು ಹೇಳಲಾಗಿದೆ.