ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ, ರಚನಾತ್ಮಕ ಚಟುವಟಿಕೆಗಳ ಮೂಲಕ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕುಮಾರ್ ಅವರ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರಕಿ ಮಾದರಿ ಜಿಲ್ಲೆಯಾಗಿ ಮೂಡಿಬರಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾದ ಜಿಲ್ಲಾ ನೂತನ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರ ಕಚೇರಿಯನ್ನು ಶನಿವಾರ ಉದ್ಘಾಟಿಸಿ ನಳಿನ್ ಮಾತನಾಡಿದರು.
ಸುನಿಲ್ ಅವರು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹತ್ತಾರು ಸುಧಾರಣೆಗಳನ್ನು ತಂದು ಹೊಸ ಆಯಾಮವನ್ನು ನೀಡಿ ಕಾರ್ಯತತ್ಪರತೆ ಮೆರೆದಿದ್ದಾರೆ. ತನ್ನ ಕ್ಷೇತ್ರವಾದ ಕಾರ್ಕಳದಲ್ಲಿ ಅಭಿವೃದ್ಧಿಯ ಮಹಾಪೂರವನ್ನೇ ಹರಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳತ್ತ ಕಾರ್ಯೋನ್ಮುಖರಾಗಿದ್ದಾರೆ ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾೖಕ್, ಉಮಾನಾಥ ಕೋಟ್ಯಾನ್, ಡಾ| ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮಗಳ ಅಧ್ಯಕ್ಷರಾದ ನಿತಿನ್ ಕುಮಾರ್, ಹರಿಕೃಷ್ಣ ಬಂಟ್ವಾಳ, ಸಂತೋಷ್ ಕುಮಾರ್ ರೈ ಬೋಳಿಯಾರು, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಸ್ವಾಗತಿಸಿದರು.
ರಾಜ್ಯ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಚಿವ ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಶುಭಕೋರಿದರು.
ಇದನ್ನೂ ಓದಿ:ಪ್ರಧಾನಿ ಫೋಟೋ ಬೇಡ ಎನ್ನುವುದು ಮೂಲಭೂತ ಹಕ್ಕಲ್ಲ: ಕೇರಳ ಹೈಕೋರ್ಟ್
ಫೆ. 11ರಂದು ಕೆಡಿಪಿ ಸಭೆ
ಫೆ. 11ರಂದು ಜಿಲ್ಲಾ ಕೆಡಿಪಿ ಸಭೆ ಆಯೋಜಿಸಲು ಜಿಲ್ಲಾಧಿಕಾರಿಯವರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಸಭೆಯಲ್ಲಿ ಶಾಸಕರು, ಜನಪ್ರತಿನಿಧಿ ಸಮ್ಮುಖದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳು, ಜಿಲ್ಲೆಯ ಆವಶ್ಯಕತೆಗಳು, ಮುಂದಿನ ಒಂದು ವರ್ಷಗಳಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಸುನಿಲ್ ಕುಮಾರ್ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಕಾರ್ಯಯೋಜನೆ
ಸಚಿವ ಸುನಿಲ್ ಕುಮಾರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ನನ್ನ ಕಾರ್ಯಚಟುವಟಿಕೆಗಳನ್ನು ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಚೇರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಉದ್ಘಾಟಿಸಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರ ಜತೆ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡಿ ಕಾರ್ಯಯೋಜನೆಗಳನ್ನು
ರೂಪಿಸಲಾಗುವುದು ಎಂದರು.