Advertisement

ಹೆಚ್ಚಿನ ಅನುದಾನ ನಮ್ಮದು

12:30 AM Feb 17, 2019 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜತೆಗೂಡಿ ಜಾರಿಗೊಳಿಸುತ್ತಿರುವ ‘ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ’ ಯೋಜನೆಯಡಿ ರಾಜ್ಯ ಸರ್ಕಾರ ಹೆಚ್ಚು ಅನುದಾನ ಭರಿಸುತ್ತಿದ್ದರೂ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

Advertisement

“ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ’ ಯೋಜನೆಯಡಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ರಾಜ್ಯ ಸರ್ಕಾರದ್ದೇ ಹೆಚ್ಚು ಅನುದಾನ. ಆದರೂ, ಕೇಂದ್ರ ಸರ್ಕಾರದ ಜಾಹೀರಾತುಗಳಲ್ಲಿ ಕೇವಲ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ. ಫ‌ಲಾನುಭವಿಗಳಿಗೆ ಕಳುಹಿಸುತ್ತಿರುವ ಪತ್ರಗಳಲ್ಲೂ ಕೇಂದ್ರ ಸರ್ಕಾರದ್ದೇ ಯೋಜನೆ ಎಂದು ಬಿಂಬಿಸಲಾಗುತ್ತಿದೆ ಎಂದು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದೆ ಆಯುಷ್ಮಾನ್‌ ಭಾರತ್‌ ಅಥವಾ ಪ್ರಧಾನಮಂತ್ರಿ ಸ್ವಾಸ್ಥ್ಯ ಭಿಮಾ ಯೋಜನೆಯಡಿ 1,349 ಕಾಯಿಲೆಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿತ್ತು. ಇದೀಗ ಆರೋಗ್ಯ ಕರ್ನಾಟಕ ಜತೆಗೂಡಿದ ಮೇಲೆ 1,614 ಕಾಯಿಲೆಗಳಿಗೆ ಚಿಕಿತ್ಸೆ ದೊರೆಯುತ್ತಿದೆ. ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 62.2 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿತ್ತು. ಆದರೆ,ರಾಜ್ಯ ಸರ್ಕಾರದ ಯೋಜನೆಯಡಿ 1.2 ಕೋಟಿ ಬಿಪಿಎಲ್‌ ಕುಟುಂಬಗಳಿಗೆ ಯೋಜನೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರವೇ 58 ಲಕ್ಷ ಕುಟುಂಬಗಳ ವೆಚ್ಚ ಭರಿಸುತ್ತಿದೆ.ಇದುವರೆಗೂ 40,483 ಫ‌ಲಾನುಭವಿಗಳಿಗೆ ಚಿಕಿತ್ಸೆ ನೀಡಿದ್ದು, ಆ ಪೈಕಿ 9970 ಫ‌ಲಾನುಭವಿಗಳು ಕೇಂದ್ರ ಸರ್ಕಾರದ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ. ಉಳಿದ 30,153 ಫ‌ಲಾನುಭವಿಗಳು ರಾಜ್ಯ ಸರ್ಕಾರದ ಅನುದಾನದಡಿ ಚಿಕಿತ್ಸೆ ಪಡೆದಿದ್ದಾರೆ. ಒಟ್ಟಾರೆ 161 ಕೋಟಿ ರೂ.ವೆಚ್ಚವಾಗಿದ್ದು, ರಾಜ್ಯ ಸರ್ಕಾರ 139 ಕೋಟಿ ರೂ.ಭರಿಸಿದೆ. ಕೇಂದ್ರ ಸರ್ಕಾರ 22 ಕೋಟಿ ರೂ.ಮಾತ್ರ ಭರಿಸಿದೆ. ಆದರೆ, ಯೋಜನೆ ಸಂಪೂರ್ಣ ಕೇಂದ್ರ ಸರ್ಕಾರವೇ ಭರಿಸುತ್ತಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ ಕಾರ್ಯಕ್ರಮಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮುಖ್ಯಸ್ಥರು, ಸಂಬಂಧಪಟ್ಟವರ ಭಾವಚಿತ್ರ ಬಳಕೆ ಮಾಡಬೇಕು. ರಾಜ್ಯ ಸರ್ಕಾರದ ಜತೆಯೂ ಕಾರ್ಯಕ್ರಮ ಆಯೋಜನೆ ಬಗ್ಗೆ ಚರ್ಚಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪರೀಕ್ಷಾ ಸಿದ್ಧತೆ ಪರಿಶೀಲನೆ
ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಈ ಹಿಂದಿನಂತೆ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲು ಗೃಹ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು. ಹಿಂದಿನ ವರ್ಷಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದವರು ಹಾಗೂ ಪರೀಕ್ಷಾ ಕ್ರಮಕ್ಕೆ ಕಾರಣವಾಗುವವರ ಮೇಲೆ ಕಟ್ಟುನಿಟ್ಟಾಗಿ ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕ ಪಡದಂತೆ ಓದಲು ಹಾಗೂ ಪರೀಕ್ಷೆ ಬರೆಯಲು ಬೇಕಾದ ವಾತಾವರಣವನ್ನು ಈಗಿಂದಲೇ ಕಲ್ಪಿಸಬೇಕು. ಪಾಲಕ, ಪೋಷಕರಿಗೂ ಈ ಬಗ್ಗೆ ಎಚ್ಚರಿಕೆ ವಹಿಸಿ, ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ಹಾಗೂ ಪಾಲಕರು ದೂರ ಇರುವುದು ಒಳಿತು ಎಂದು ಸಲಹೆ ನೀಡಿದರು.

Advertisement

ಪಾಸ್ವಾನ್‌ಗೆ ಸಿಎಂ ಪತ್ರ
ಬೆಂಗಳೂರು:
ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಬಾಕಿ ಇರುವ ಹಣ ಪಾವತಿ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಕಬ್ಬು ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಜ.31ರಂದು ರೈತರ ಬಾಕಿ ಪಾವತಿ ಸಂಬಂಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಪಾಸ್ವಾನ್‌ ಅವರು ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮದ ಬಗ್ಗೆ ಮುಖ್ಯಮಂತ್ರಿಯವರು ಪತ್ರದ ಮುಖೇನ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 2017-18 ಹಾಗೂ 2018-19ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ಬಾಬಿ¤ನ ಹಣವನ್ನು ರೈತರಿಗೆ ಪಾವತಿಸುವುದು ಬಾಕಿ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜತೆಯೂ ಸಭೆ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನೂ ಮಾಡಲಾಗಿದೆ. ಆದಷ್ಟು ಬೇಗ ರೈತರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳುವಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಕಬ್ಬು ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next