ಚಿಕ್ಕಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಕಲ್ಪಿಸಲು ರೂಪಿಸಿರುವ ಎತ್ತಿನಹೊಳೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸಿ, ಹೆಚ್ಚಿನ ಅನುದಾನ ಕೊಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದು, ಮುಂದಿನ 2023ರೊಳಗೆ ಯೋಜನೆಯನ್ನು ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿ ಕೊಳ್ಳುತ್ತೇನೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯು ಕುಡಿವ ನೀರಿನ ಯೋಜನೆ ಯಾಗಿದೆ. ಇದರಿಂದ ಬಯಲು ಸೀಮೆಯ ಸುಮಾರು 7-8 ಜಿಲ್ಲೆಗಳಿಗೆ ನೀರಿನ ದಾಹ ನೀಗಲಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ರೂಪಿಸಬೇಕು. ಇನ್ನೂ ಅಗತ್ಯವಿರುವ ಅನುದಾನವನ್ನು ಕೇಂದ್ರ ಸರಕಾರ ನೀಡಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ಫಲಪ್ರದವಾಗಲು ಇನ್ನಷ್ಟು ಶ್ರಮ ಹಾಕಲಾಗುವುದು ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ 9 ತಾಲೂಕುಗಳಲ್ಲಿ 2020-21ನೇ ಸಾಲಿಗೆ ಪ್ರಧಾನಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿ ಒಟ್ಟಾರೆ 249.79 ಕಿ.ಮೀ.ನಷ್ಟು ರಸ್ತೆ ಅಭಿವೃದ್ಧಿಗೆ 173.13 ಕೋಟಿ ರೂ. ಮಂಜೂರು ಆಗಿದೆ. ಇದರಲ್ಲಿ ಬೆಂಗಳೂರಿನ ಯಲಹಂಕ ತಾಲೂಕಿನಲ್ಲಿ 46.11 ಕಿ.ಮೀ. ರಸ್ತೆಗೆ 45.63 ಕೋಟಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ತಾಲೂಕುಗಳಲ್ಲಿ ಒಟ್ಟು 97.94 ಕಿ.ಮೀ. ರಸ್ತೆಗೆ 61.30 ಕೋಟಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕುಗಳಲ್ಲಿ ಒಟ್ಟು 105.74 ಕಿ.ಮೀ. ರಸ್ತೆಗೆ 66.20 ಕೋಟಿ ರೂ., ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.
ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ: ಕೊರೊನಾದಿಂದ ರಾಜ್ಯ, ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸಲು ಹೋರಾಟ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ, ರಾಜ್ಯದಲ್ಲಿ ಕೊರೊನಾದಿಂದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಈ ಸಂದರ್ಭದಲ್ಲಿ ಲಕ್ಷಾಂತರ ನೌಕರರು ಸರ್ಕಾರದ ವಿರುದ್ಧ ಹೋರಾಟ ಸರಿಯಲ್ಲ, ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು.
ನರೇಗಾ ಯೋಜನೆ ಮೂಲಕ 73 ಸಾವಿರ 500 ಕೋಟಿ ರೂ.ಗಳ ಅನುದಾನ ನೀಡಲಾಗಿದ್ದು, ಈ ಯೋಜನೆ ವ್ಯಾಪ್ತಿಗೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲು ಮನವಿ ಮಾಡಿದ್ದೇವೆ. ಚಿಕ್ಕಬಳ್ಳಾಪುರ ರಾಜ್ಯದಲ್ಲಿ 3ನೇ ಸ್ಥಾನ ಪಡೆದಿದೆ. ಯೋಜನೆ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮ ಅನುಷ್ಠಾಗೊಳಿಸಲಾಗುವುದು ಎಂದರು.