Advertisement

Chikkodi ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಮನವಿ

04:04 PM Jul 21, 2024 | |

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ ಸಲ್ಲಿಸಿದರು.

Advertisement

ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಜು.21ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಮಕನಮರಡಿ, ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಕಾಗವಾಡ, ಅಥಣಿ, ರಾಯಬಾಗ, ಕುಡಚಿ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ಹೀಗಾಗಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಸಣ್ಣ ನೀರಾವರಿ ಇಲಾಖೆ, ಬೃಹತ್ ನೀರಾವರಿ, ಮುಜರಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪ್ರವಾಸೋದ್ಯಮ, ಯುವ ಸಬಲೀಕರಣ ಮತ್ತು ಕ್ರೀಡಾ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಶಿಕ್ಷಣ ಇಲಾಖೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳಲು ಒಟ್ಟು 60 ಕೋಟಿ ರೂಪಾಯಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿಶೇಷ ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಶಂಕರಗೌಡ ಪಾಟೀಲ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next