ಬೆಂಗಳೂರು: ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಆ.19) ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಮುಡಾ ಅಕ್ರಮದ ಆರೋಪದ ಕುರಿತು ಕಾನೂನು ಹೋರಾಟಕ್ಕೆ ಸಜ್ಜಾಗಿರುವ ಸಿಎಂ ಸಿದ್ದರಾಮಯ್ಯ ಅವರು ಅಗತ್ಯ ದಾಖಲೆಗಳನ್ನ ಸಿದ್ದಪಡಿಸಿಕೊಂಡಿದ್ದು, ಪ್ರಬಲ ವಾದ ಮಂಡಿಸಲು ನುರಿತ ಹಿರಿಯ ವಕೀಲರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ:Mangaluru; ಕೇಂದ್ರ ಸರ್ಕಾರ, ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಬೃಹತ್ ಪಾದಯಾತ್ರೆ
ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮಾ ಕುಮಾರ್ ಅವರು ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಸಿ, ಶೀಘ್ರ ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡರು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಸಿಬಲ್, ಸಿಂಘ್ವಿ ಬೆಂಗಳೂರಿಗೆ ಆಗಮನ:
ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯಿಂದ ಸುಪ್ರೀಂಕೋರ್ಟ್ ನ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರಶಾಂತ್ ಭೂಷಣ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಮೂವರು ಹಿರಿಯ ವಕೀಲರ ಜತೆ ಪ್ರಕರಣದ ಬಗ್ಗೆ ಸಮಾಲೋಚನೆ ನಡೆಸಿ, ಕಾನೂನು ಹೋರಾಟದ ಸಲಹೆ ಪಡೆಯಲಿದ್ದಾರೆ ಎಂದು ವರದಿ ವಿವರಿಸಿದೆ.