ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಪ್ರಕರಣದ 3ನೇ ಮತ್ತು 4ನೇ ಆರೋಪಿಗಳನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ (ಎ-3), ಭೂಮಿ ಮಾರಾಟ ಮಾಡಿದ ದೇವರಾಜು (ಎ-4 ಆರೋಪಿ)ಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಸೆ. 27ರಂದು ಸಿಎಂ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಅವರು, ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದರು. ಬಳಿಕ ಕೆಸರೆಯಲ್ಲಿ ಮಾರಾಟವಾಗಿದ್ದ ಭೂಮಿ ಯಲ್ಲಿ ಸ್ಥಳ ಮಹಜರು ನಡೆಸಿದ್ದರು. ಬಳಿಕ ತಾಲೂಕು ಕಚೇರಿಗೆ ತೆರಳಿ ಅಗತ್ಯ ದಾಖಲೆ ಪಡೆ ದು ಕೊಂಡಿದ್ದರು. ಅನಂತರ ವಿಜಯನಗರದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾಯಿಂದ ಮಂಜೂರಾಗಿದ್ದ 14 ನಿವೇಶನಗಳ ಬಳಿ ತೆರಳಿ ದೂರುರಾದರ ಸಮ್ಮುಖದಲ್ಲಿ ಮಹಜರು ನಡೆಸಿದ್ದರು. ಈ ವೇಳೆ ಮುಡಾ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದಿದ್ದರು.
ಈಗ ಪ್ರಕರಣದಲ್ಲಿ 3ನೇ ಆರೋಪಿಯಾದ ಸಿದ್ದರಾಮಯ್ಯನವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಿ ಮಾರಾಟ ಮಾಡಿದ ದೇವರಾಜು ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದ್ದು, ಗುರುವಾರ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಹಾಗೂ ಪತ್ನಿಗೂ ನೋಟಿಸ್ ನೀಡುವ ಸಾಧ್ಯತೆಯಿದೆ.
ಯಾರ್ಯಾರಿಗೆ ನೋಟಿಸ್?
-ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ (ಎ-3):ಅಕ್ರಮ ದಾಖಲೆಗಳ ಸಂಗ್ರಹಿಸಿದ್ದ ಆರೋಪ
-ದೇವರಾಜು: (ಎ-4) : ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿದ ಆರೋಪ