ಮುದ್ದೇಬಿಹಾಳ: ಹೊಲದಲ್ಲಿ ಕೆಲಸ ಮಾಡಲು ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದು 15 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಜಂಗಮುರಾಳ ಹತ್ತಿರ ನಡೆದಿದೆ.
ಗಂಭೀರ ಸ್ಥಿತಿಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಇನ್ನುಳಿದವರಿಗೆ ಇಲ್ಲಿನ ತಾಲೂಕು ಸರ್ಕಾರಿ ಅಸ್ಪತ್ರೆಯಲ್ಲಿ ಅಡಳಿತ ವೈದ್ಯಾಧಿಕಾರಿ ಡಾ। ಅನೀಲಕುಮಾರ ಶೇಗುಣಸಿ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡತೊಡಗಿದೆ.
ಎದುರಿಗೆ ಬಂದ ದನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಅಸ್ಪತ್ರೆಗೆ ಭೇಟಿ ನೀಡಿರುವ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿ ಗುಣಮಟ್ಟದ ಚಿಕಿತ್ಸೆ ಕೊಡುವಂತೆ ಕೋರಿದರು.
ಘಟನೆ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಅವರು ಗಾಯಾಳುಗಳೆಲ್ಲ ಹುಲಗಬಾಳದವರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರನ್ನು ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಶಾಸಕ ಸಿ.ಎಸ್.ನಾಡಗೌಡರಿಗೆ ವಿಷಯ ಗೊತ್ತಾದ ಕೂಡಲೇ ನನ್ನನ್ನು ಆಸ್ಪತ್ರೆಗೆ ಕಳಿಸಿ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ದೊರಕಿಸಿಕೊಡಲು ಕ್ರಮ ಕೈಕೊಳ್ಳುವಂತೆ ತಿಳಿಸಿದ್ದು ಘಟನೆಗೆ ವಿಷಾಧ ವ್ಯಕ್ತಪಡಿಸಿ ಗಾಯಾಳುಗಳಿಗೆ ಸಾಂತ್ವನ ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ: Israel-Hamas War: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ