Advertisement

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ಅರೋಗ್ಯ ಸಚಿವರ ಜೊತೆ ಸಭೆ

11:57 AM Sep 20, 2022 | Team Udayavani |

ಶಿರಸಿ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರೊಂದಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರ ಜೊತೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಸಭೆ ನಡೆಸಿದರು.

Advertisement

ಹೆಬ್ಬಾರ್ ಅವರು ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದರು ಹಾಗೂ ಜಿಲ್ಲೆಯಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಖಾಸಗಿ ಸಹಭಾಗಿತ್ವದಲ್ಲಿ ಶೀಘ್ರದಲ್ಲೇ ಆಸ್ಪತ್ರೆಯ ನಿರ್ಮಾಣ ಬಗ್ಗೆ ಆರೋಗ್ಯ ಸಚಿವರು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡುವಂತೆ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಗಳಿಗೆ ತಜ್ಞ ವೈದ್ಯರು ಮತ್ತು ಅಗತ್ಯವಿರುವ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮಂಜೂರು ಮಾಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಆರೋಗ್ಯ ಸಚಿವರಾದ ಡಾ.ಕೆ ಸುಧಾಕರ ಉತ್ತರ ಕನ್ನಡ ಜಿಲ್ಲೆಯ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳು ಸಾಗುತ್ತಿದೆ, ಸಚಿವರಾದ ಶಿವರಾಮ ಹೆಬ್ಬಾರ್ ಅವರ ನೀಡಿರುವ ಸಲಹೆಯಂತೆ ಖಾಸಗಿಯವರ ಸಹಭಾಗಿತ್ವದಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ ಕುಮಟಾದಲ್ಲಿ ಸ್ಥಳವನ್ನು ಗುರುತಿಸಲಾಗಿದೆ. ಅಧಿವೇಶನ ಮುಗಿದ ನಂತರದಲ್ಲಿ ಜಿಲ್ಲೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆಸ್ಪತ್ರೆಯ ನಿರ್ಮಾಣ ಬಗ್ಗೆ ಘೋಷಣೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ದಿನಕರ ಕೆ ಶೆಟ್ಟಿ, ರೂಪಾಲಿ ನಾಯ್ಕ, ವಿಧಾನಪರಿಷತ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ದಿ, ಹಾಗೂ ಜಿಲ್ಲೆಯ, ರಾಜ್ಯ ಮಟ್ಟದ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next