ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊಪ್ಪಳ ರಸ್ತೆಯ ಹಳ್ಳಿಕೇರಿ- ಬನ್ನಿಕೊಪ್ಪ ನಡುವೆ ಜರುಗಿದೆ.
ಕೊಪ್ಪಳದಿಂದ ಗದಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ಗದಗದಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಲಾರಿ ಚಾಲಕ ವಿನೋದಕುಮಾರ್ ಹಾಗೂ ಕೊಪ್ಪಳ ಜಿಲ್ಲೆಯ ಭಾಗ್ಯನಗರ ನಿವಾಸಿ ಗೀತಾ ಎನ್ನಲಾಗಿದೆ. ಮೃತ ಮಹಿಳೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡಕ್ಕೆ ಹೊರಟಿದ್ದರು ಎನ್ನಲಾಗಿದೆ.
ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪ್ರಭುಗೌಡ, ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.