ವಿಜಯಪುರ: ಜಿಲ್ಲೆಯ 6 ತಾಲೂಕು ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಯೋಜನೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಹೆಸರು ಕಾಳು ಮಾರಾಟವಾಗುತ್ತಿದೆ. ಹೀಗಾಗಿ ಜಿಲ್ಲೆಯ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಹಾಗೂ ಇಂಡಿ ಸೇರಿದಂತೆ 6 ತಾಲೂಕುಗಳಲ್ಲಿ ಬೆಂಬಲ ಬೆಲೆ ಯೋಜನೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ 6712 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರು ಬೆಳೆ ಬಿತ್ತನೆಯಾಗಿದ್ದು ಕೃಷಿ ಇಲಾಖೆ ಮಾಹಿತಿ ಪ್ರಕಾರ ಅಂದಾಜು 50,340 ಕ್ವಿಂಟಲ್ ಇಳುವರಿ ಬರಬಹುದು ಎಂದು ನಿರೀಕ್ಷಿಸಲಾಗಿದ್ದು, ಜಿಲ್ಲೆಯ ಯಾವ ರೈತರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ಗೆ 7196 ರೂ. ನಿಗದಿ ಮಾಡಿದೆ. ಪ್ರತಿ ಎಕರೆಗೆ 4 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂಟಲ್ ಖರೀದಿ ಪ್ರಮಾಣ ನಿಗದಿ ಪಡಿಸಿ ಖರೀದಿಸಬೇಕು. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ಡಿಬಿಐ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ಸೂಚಿಸಿದರು.
ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರು ಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಅದರಂತೆ ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಕೋವಿಡ್ ಹಿನ್ನೆಲೆ ಖರೀದಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ನಿಯಮ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎಪಿಎಂಸಿ ಸಹಾಯಕ ನಿರ್ದೇಶಕ ಛಬನೂರ ಸೇರಿದಂತೆ ಇದ್ದರು.