ಬೆಂಗಳೂರು : ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಜ.1ರಿಂದ ಫೆ.7ರವರೆಗೆ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸುವುದಕ್ಕೆ ಕೇಂದ್ರ ಸರಕಾರದ ಪತ್ರದ ಮೇರೆಗೆ ರಾಜ್ಯ ಸರಕಾರ ಸೂಚನೆ ನೀಡಿದೆ.
ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಅಂಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಈ ಪತ್ರ ಬರೆದಿದೆ. ಡಿ. ೧೬ರಂದು ಎಲ್ಲ ರಾಜ್ಯಗಳ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಈ ಪತ್ರ ತಲುಪಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರ ಬರೆಯಲಾಗಿದ್ದು, ಸಂಗೀತದೊಂದಿಗೆ ಸೂರ್ಯ ನಮಸ್ಕಾರ ಆಯೋಜಿಸಬೇಕೆಂದು ಸೂಚನೆ ನೀಡಲಾಗಿದೆ. ಆದರೆ ಈ ಆದೇಶಕ್ಕೆ ಉಪನ್ಯಾಸಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ವಿಳಂಬವಾಗಿ ಆರಂಭಗೊಂಡಿದೆ. ಪಠ್ಯಕ್ರಮವನ್ನು ನಿಗದಿತ ವೇಳೆಯಲ್ಲಿ ಪೂರ್ಣಗೊಳಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಯೋಗಾಭ್ಯಾಸಕ್ಕೂ ಸಮಯ ಮೀಸಲಿಟ್ಟರೆ ಇನ್ನಷ್ಟು ಸಮಸ್ಯೆಯಾಗುತ್ತದೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ. ಆದರೆ ಶಿಕ್ಷಣ ಇಲಾಖೆ ಕೇಂದ್ರದತ್ತ ಕೈ ತೋರುತ್ತಿದೆ.
ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಶನ್ ಕೆಲ ದಿನಗಳ ಹಿಂದೆ ಕೇಂದ್ರ ಶಿಕ್ಷಣ ಇಲಾಖೆಗೆ ಪತ್ರ ಬರೆದು ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜನೆಗೆ ಕೋರಿತ್ತು. 30 ರಾಜ್ಯಗಳಲ್ಲಿ 30 ಸಾವಿರ ಪದವಿಪೂರ್ವ ಕಾಲೇಜುಗಳಲ್ಲಿ 3 ಲಕ್ಷ ವಿದ್ಯಾರ್ಥಿಗಳಿಂದ ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜಿಸುವ ಗುರಿಯನ್ನು ಈ ಸಂಸ್ಥೆ ಹೊಂದಿದೆ. ಈ ಹಿನ್ನೆಲೆಯಲ್ಲಿಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ.