ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಮತ್ತು ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ವಿರೋಧಿಸಿ ಹಾಗೂ ಮಂಗಳೂರು ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ಕಾರ್ಯಾಧ್ಯಕ್ಷಪಿ.ಎಂ. ಖಾಸಿಂ ಮತ್ತು ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್ ಅ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ರಿಜೆಕ್ಟ್ ಸಿಎಎ, ಬಾಯ್‌ಕಾಟ್ ಎನ್‌ಆರ್‌ಸಿ, ಸೇವ್ ಇಂಡಿಯಾ ಎನ್ನುವ ಫಲಕಗಳನ್ನು ಪ್ರದರ್ಶಿಸಿ, ಅಂಬೇಡ್ಕರ್, ಮಹಾತ್ಮಾ ಗಾಂಧೀಜಿಯವರ ಭಾವ ಚಿತ್ರಗಳನ್ನು ಹಿಡಿದು ಕೇಂದ್ರದ ಧೋರಣೆಯನ್ನು ತೀವ್ರವಾಗಿ ವಿರೋಧಿಸಿದರು.
ಸಂವಿಧಾನ ಬದಲಿಸುವವರಿಗೆ ತಲೆಬಾಗುವುದಿಲ್ಲ-ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ಕಾರ್ಯಾಧ್ಯಕ್ಷ ಪಿ.ಎಂ.ಖಾಸಿಂ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನಕ್ಕೆ ಮಾತ್ರ ತಲೆ ಬಾಗುತ್ತೇವೆಯೇ ಹೊರತು ಸಂವಿಧಾನವನ್ನು ಬದಲಾಯಿಸಲು ಹೊರಟಿರುವವರಿಗಲ್ಲ. ಈ ದೇಶದ ದಲಿತರು ಹಾಗೂ ಮುಸಲ್ಮಾನರು ಒಂದಾದಲ್ಲಿ ಅಮಿತ್ ಷಾ ಮತ್ತು ನರೇಂದ್ರ ಮೋದಿ ಅವರ ಅಧಿಕಾರ ನೆಲಕ್ಕುರುಳಲಿದೆ ಎಂದು ಎಚ್ಚರಿಕೆ ನೀಡಿದರು.
ಎಸ್‌ಡಿಪಿಐ ರಾಜ್ಯ ಸಮಿತಿಯ ಸದಸ್ಯ ಅಮಿನ್ ಮೊಹ್ಸಿನ್ ಮಾತನಾಡಿ, ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಸಂವಿಧಾನಕ್ಕೆ ಹಾಗೂ ರಾಷ್ಟ್ರದ ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ. ಈ ಕಾಯ್ದೆಗಳನ್ನು ಪ್ರತಿಯೊಬ್ಬ ಭಾರತೀಯರು ತಿರಸ್ಕರಿಸುವ ಮೂಲಕ ಶಾಂತಿಯುತವಾದ ಚಳವಳಿಗೆ ನಾಂದಿ ಹಾಡಬೇಕೆಂದು ಕರೆ ನೀಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯನ್ನು ಮೊದಲು ಕರ್ನಾಟಕದಲ್ಲಿ ಜಾರಿಗೆ ತರುವುದಾಗಿ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಹೇಳಿದ್ದು, ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾದಲ್ಲಿ ತೀವ್ರವಾಗಿ ವಿರೋಧಿಸುವುದಾಗಿ ಎಚ್ಚರಿಕೆ ನೀಡಿದರು. ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಹೋರಾಟ ನಿರತ ಯುವಕರು ಹಾಗೂ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಯುವಕರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಅಮಾಯಕರನ್ನು ಸಾಯಿಸಿದ್ದಾರೆ ಎಂದು ಆರೋಪಿಸಿದ ಅವರು, ಅಲ್ಲಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಸಮಾವೇಶದ ಬಳಿಕಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಮೂಲಕ ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸಮಾವೇಶದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಪ್ರಮುಖರಾದ ಅಬ್ದುಲ್ ಲತೀಫ್, ಮನ್ಸೂರ್, ಅಬೂಬಕ್ಕರ್, ಮನ್ಸೂರ್, ಇಸ್ಮಾಯಿಲ್, ಉಮ್ಮರ್ ಫೈಝಿ, ರಝಾಕ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು