Advertisement

ಮುಜರಾಯಿ ಸಚಿವರು, ಅಧಿಕಾರಿಗಳಿಗೆ ಸಿಎಂ ಕ್ಲಾಸ್‌

06:05 AM Feb 08, 2018 | |

ಬೆಂಗಳೂರು:ಹಿಂದೂ ಧಾರ್ಮಿಕ ಮಠ ಹಾಗೂ ಮಠದ ಒಡೆತನದಲ್ಲಿರುವ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಲು ಹೊರಡಿಸಿರುವ ಸುತ್ತೋಲೆ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Advertisement

ಬುಧವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಅಧಿಕಾರಿಗಳನ್ನು ಕರೆಸಿ ಮಾಹಿತಿ ಪಡೆದ ಅವರು, ಚುನಾವಣೆ ಸಂದರ್ಭದಲ್ಲಿ ಇಂಥ ಸುತ್ತೋಲೆ ಹೊರಡಿಸಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಸಚಿವರ ಗಮನಕ್ಕೆ ತರದೇ ಅಧಿಕಾರಿಗಳು ಈ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹೇಳಲಾಗಿದ್ದು ಇದಕ್ಕೂ ಅವರು ರೇಗಾಡಿದ್ದಾರೆ. ಜತೆಗೆ ಈ ವಿಚಾರದಲ್ಲಿ ನೀವು ಏನು ಮಾಡುತ್ತಿದ್ದೀರಿ ಎಂದು ಸಚಿವರನ್ನೂ ಮುಖ್ಯಮಂತ್ರಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದಲ್ಲಿ ವಿರೋಧ: ಸುತ್ತೋಲೆ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿದೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡದೆ ಚುನಾವಣೆ ಸಂದರ್ಭದಲ್ಲಿ ಇಂತಹ ಸುತ್ತೋಲೆ ಹೊರಡಿಸುವ ಅಗತ್ಯವಿತ್ತೇ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರದ ಈ ನಿರ್ಧಾರದಿಂದ ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯತೆ ಇಲ್ಲ ಎಂಬ ಸಂದೇಶ ರವಾನೆಯಾಗುತ್ತದೆ. ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತದೆ ಎಂಬ ಸುದ್ದಿ ಬಂದಾಗ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇಂತಹ ಉದಾಹರಣೆಗಳು ಕಣ್ಣ ಮುಂದೆ ಇದ್ದಾಗ ಈ ರೀತಿಯ ನಡೆ ಪಕ್ಷಕ್ಕೆ ಹಿನ್ನಡೆಯುಂಟು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಠಗಳು ಹಾಗೂ ದೇವಸ್ಥಾನಗಳನ್ನು ಸರ್ಕಾರದ ವ್ಯಾಪ್ತಿಗೆ ತೆಗೆದುಕೊಳ್ಳುವ ಆದೇಶ ಸರ್ಕಾರ ಮಾಡಿಲ್ಲ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳಿದ್ದೇವೆ. ಬಿಜೆಪಿಯವರು ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಮಠಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಊಹಾ ಪೋಹಗಳ ಬಗ್ಗೆ ಮಠಾಧೀಶರು ಹೆದರುವ ಅಗತ್ಯವಿಲ್ಲ. ಕೋರ್ಟ್‌ ನಿರ್ದೇಶನದಂತೆ ಸಾರ್ವಜನಿಕರ ಅಭಿಪ್ರಾಯ ಕೇಳಿದ್ದೇವಷ್ಟೇ.
– ರುದ್ರಪ್ಪ ಲಮಾಣಿ, ಮುಜರಾಯಿ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next