Advertisement

ಮೈ-ಚಾ.ನಗರ ಜಿಲ್ಲೆ ಕೆರೆಗಳಿಗೆ ನೀರು ತುಂಬಿಸಿ

12:45 PM Feb 16, 2017 | Team Udayavani |

ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಬುಧವಾರ ಪ್ರತಿಭಟನೆ ನಡೆಸಿದರು.

Advertisement

ನಗರ ರೈಲು ನಿಲ್ದಾಣದ ಎದುರು ಖಾಲಿ ಹಂಡೆಗಳನ್ನು ಪ್ರದರ್ಶಿಸಿದ ವಾಟಾಳ್‌ ನಾಗರಾಜ್‌, ಮಳೆ ಅಭಾವದಿಂದ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಚಾಮರಾಜನಗರದಲ್ಲಿ ಬರಗಾಲದಿಂದಾಗಿ ಜನರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಚಾಮರಾಜನಗರದ ಕೊತ್ತಲವಾಡಿ, ಸುವರ್ಣಕೆರೆ ಸೇರಿದಂತೆ ಇತರೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.

ಚಾಮರಾಜನಗರ ಜಿಲ್ಲಾಧಿಕಾರಿಗಳು ಒಂದು ತಿಂಗಳ ಒಳಗೆ ಚಾಮರಾಜನಗರದಲ್ಲಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮಾಡಬೇಕು. ಇಲ್ಲವಾದರೆ ಮಾರ್ಚ್‌ 15ರಂದು ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು.

ಮಹಾದಾಯಿ- ಕಳಸಾ- ಬಂಡೂರಿ ವಿಚಾರವಾಗಿ ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು. ಗೋವಾ- ಮಹಾರಾಷ್ಟ್ರ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಪರಿಹರಿಸಬೇಕು ಎಂದು ವಾಟಾಳ್‌ ನಾಗರಾಜ್‌ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕನ್ನಡ ಚಳವಳಿ ಹೋರಾಟಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್‌, ಬಸವರಾಜು, ಕಾರ್‌ ನಾಗೇಶ್‌, ನಾರಾಯಣಸ್ವಾಮಿ, ದೂರ ಸುರೇಶ್‌, ಅನಿಲ್‌ ಕುಪ್ಪೇಗಾಲ ಇನ್ನಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next