Advertisement

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ :ಸಿಎಂಗೆ ಯಡಿಯೂರಪ್ಪ ಪತ್ರ

04:00 PM Apr 24, 2022 | Team Udayavani |

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ , ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ . ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು ಎಂದು ಬಿಎಸ್ ವೈ ಅವರು ಪತ್ರದಲ್ಲಿ ಬರೆದಿದ್ದಾರೆ.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ , ಅಭಿಮಾನಕ್ಕೆ ಧನ್ಯವಾದಗಳು . ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು , ವಿಧಾನ ಪರಿಷತ್‌ ಸದಸ್ಯರು , ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ . ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು . ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿಬರೆಯಲಾಗಿದೆ.

ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ , ಸೂಕ್ತ ವೇದಿಕೆಯಲ್ಲಿ ಚರ್ಚಿಸಿ , ರಾಷ್ಟ್ರದ , ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಯಡಿಯೂರಪ್ಪ ಅವರು ಪಾತ್ರದ ಮೂಲಕ ಬೇರೆ ಸಾಧಕರ ಹೆಸರನ್ನು ಇಡಲು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next