ಬೆಂಗಳೂರು : ಮೈಸೂರು ಪ್ರವಾಸಿ ತಾಣ. ಅಲ್ಲಿ ಈ ರೀತಿಯ ಪ್ರಕರಣಗಳು ಆಗಬಾರದು. ಮೈಸೂರಿನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ದುಃಖವಾಗಿದೆ ಎಂದು ಗೃಹ ಮಂತ್ರಿ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಜ್ಞಾನೇಂದ್ರ, ನಾಳೆ ಮೈಸೂರಿಗೆ ಹೋಗುತ್ತಿದ್ದೇನೆ. ಈಗಾಗಲೇ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಸಿಎಂ ಜೊತೆಯೂ ಸಮಾಲೋಚನೆ ಮಾಡುತ್ತೇನೆ. ಇದು ಅತ್ಯಂತ ನೋವು ತಂದಿದೆ ಎಂದಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬೇಡ : ಗುಂಡೂರಾವ್ ಕಿಡಿ
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂದು ಉನ್ನತ ಮಟ್ಟದ ಅಧಿಕಾರಿಗಳು ಮೈಸೂರಿಗೆ ತೆರಳುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಕರಣದ ಸಂಪೂರ್ಣ ವರದಿ ಕೊಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಘಟನೆ ನಡೆದಿರುವುದು ಅತ್ಯಂತ ದುರದೃಷ್ಟಕರ. ಈ ಹಿಂದೆ ನಡೆದಿದ್ದ ಶೂಟೌಟ್ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಲಾಗಿದೆ. ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ಮೈಸೂರಿಗೆ ತೆರಳುವಂತೆ ಸೂಚಿಸಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡವನ್ನು ರಚಿಸುತ್ತೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನಕ್ಕೆ ಡಿಜಿಪಿಗೆ ಸಿಎಂ ಸೂಚನೆ