ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವುದರಿಂದ 2020ರ ಮೈಸೂರು ದಸರಾಗೆ ಚಾಲನೆ ನೀಡಲಾಯಿತು.
ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ದಸರಾ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದರೊಂದಿಗೆ ಹತ್ತು ದಿನಗಳ ಸರಳಾ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಮುಖ್ಯಮಂತ್ರಿಗಳೊಂದಿಗೆ ಬೆಟ್ಟಕ್ಕೆ ಆಗಮಿಸಿದ ಡಾ.ಸಿ.ಎನ್. ಮಂಜುನಾಥ್ ಅವರು ಮೊದಲಿಗೆ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಸ್ಥಾನದ ಪಕ್ಕದಲ್ಲೇ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ, ಬೆಳ್ಳಿರಥದಲ್ಲಿ ವಿಶೇಷವಾಗಿ ಅಲಂಕರಿ ಸರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ:ಕಾವೇರಿ ತೀರ್ಥೋದ್ಭವ: ಬೆಳಿಗ್ಗೆ 7.05ಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಜೀವನದಿ
ಸಂಜೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಸಿಗಲಿದೆ. ಅ.26ರಂದು ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಲಿದ್ದು, ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಚಾಮುಂಡೇಶ್ವರಿ ಉತ್ಸವ ಮೂರ್ತಿ ಇರುವ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ.
ಕೋವಿಡ್ ಕಾರಣದಿಂದ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಸಂಬಂಧ ಎಲ್ಲಾ ಕಾರ್ಯಕ್ರಮಗಳನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇಕುಳಿತು ವೀಕ್ಷಣೆ ಮಾಡಬೇಕು. ಯಾವುದೇ ಕಾರಣಕ್ಕೂ ಹೊರಗಡೆ ಗುಂಪು ಗುಂಪಾಗಿ ಕಾಣಿಸಿಕೊಳ್ಳಬಾರದು. ಒಟ್ಟಾಗಿ ನಿಂತು ದೀಪಾಲಂಕಾರದ ಮುಂದೆ ಸೆಲ್ಫಿ ತೆಗೆದುಕೊಳ್ಳುವುದಕ್ಕೂ ನಿರ್ಬಂಧ ಹೇರಲಾಗಿದೆ.