Advertisement
ಶನಿವಾರ ನಗರದ ಪ್ರವಾಸಿಮಂದಿರದಲ್ಲಿ ನಡೆದ ರೈತಮುಖಂಡರು, ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರ ಸಭೆಯಲ್ಲಿ ಮೈಷುಗರ್ ಮತ್ತು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಬೆಳೆದು ನಿಂತ ಕಬ್ಬನ್ನು ತಕ್ಷಣವೇ ನೆರೆ ಜಿಲ್ಲೆ ಅಥವಾ ನೆರೆ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಎರಡೂ ಕಾರ್ಖಾನೆಗಳನ್ನು ಸಮಗ್ರವಾಗಿ ಪುನಶ್ಚೇತನಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
Related Articles
Advertisement
ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಮೈಷುರ್ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಲು ಇರುವಂತಹ ಅನುಕೂಲ ಮತ್ತು ಅನಾಕೂಲಗಳ ಕುರಿತಂತೆ ಚರ್ಚೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು.
ಈ ಹಿಂದೆ ಮುಖ್ಯಮಂತ್ರಿಗಳೊಟ್ಟಿಗೆ ನಡೆದ ಸಭೆಯಲ್ಲಿ ಮೈಷುಗರ್ ತಕ್ಷಣ 69 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ಬಿಡುಗಡೆ ಮಾಡಲಿಲ್ಲ. ಜೊತೆಗೆ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಮಾತನಾಡಿ, ಮೈಷುಗರ್ ಹಾಗೂ ಪಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಜೊತೆಗೆ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದು ಅಗತ್ಯ ಎಂದರು.
ಮೈಷುಗರ್ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ ಮಾತನಾಡಿ, ಕಾರ್ಖಾನೆ ಪ್ರಾರಂಭವಾಗುವರೆವಿಗೂ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ ಸಾಗಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿದರು.
ಮಾಜಿ ಸಚಿವ ಎಂ.ಎಸ್. ಆತ್ಮಾನಂದ ಮಾತನಾಡಿ, ಈಗಾಗಲೇ ತಡ ಆಗಿದೆ. ಮತ್ತೆ ತಡ ಮಾಡುವುದು ಬೇಡ, ರೈತರ ಹಿತ ಕಾಯಬೇಕಾದದ್ದು ಸರ್ಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯ ಆಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಮನವಿ ಮಾಡಬೇಕು ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೀಲಾರ ಕೃಷ್ಣ, ರೈತ ಮುಖಂಡರಾದ ಚಂದ್ರಶೇಖರ್, ಸುಧೀರ್, ದೇಶಹಳ್ಳಿ ಮೋಹನ್‌ಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಇತರರು ಸಭೆಯಲ್ಲಿ ಭಾಗವಹಿಸಿದ್ದರು.