Advertisement

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

12:09 AM Nov 23, 2024 | Team Udayavani |

ಮೈಸೂರು: ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್‌ ಈ ಬಾರಿ ಶೇ.58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ಮಾಡಿದ್ದು ಸರಿ ಎಂದು ಪ್ರಹ್ಲಾದ್‌ ಜೋಶಿ ಹೇಳಿದರೆ, ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಎಚ್‌.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡುತ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ. ರೈತರಿಗೆ ಶೇ. 4.5 ಬಡ್ಡಿ ದರದಲ್ಲಿ ನಬಾರ್ಡ್‌ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್‌ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್‌ಗಳ ಬಳಿ ಸಾಲಕ್ಕೆ ಹೋಗಿ ಶೇ.10 ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿ¨ªಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಈ ಅನ್ಯಾಯ ಸರಿ ಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.

ವಾರಂಟ್‌ ಬಂದಿದ್ರೂ ಅದಾನಿ ಏಕೆ ಬಂಧಿಸುತ್ತಿಲ್ಲ?: ಸಿಎಂ
ಮೈಸೂರು: ಅದಾನಿಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಬಿಡದೆ ತತ್‌ಕ್ಷಣ ಬಂಧಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅರೆಸ್ಟ್‌ ವಾರಂಟ್‌ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಅವರು, ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next