ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮುಲ್ಕಿ ನಗರ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಆಗಿದ್ದ ಪದ್ಮನಾಭ ಎನ್.ಕೆ ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಠಾಣೆಯಲ್ಲಿ 2015ರಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ವಿಚಾರಣೆ ನಡೆಸಿ ಮಾ.16ರಂದು ತೀರ್ಪು ನೀಡಿದ್ದಾರೆ. 4 ವರ್ಷಗಳ ಸಾದಾ ಸಜೆ ಹಾಗೂ 26.50 ಲ.ರೂ. ದಂಡ, ದಂಡ ಪಾವತಿಸಲು ವಿಫಲನಾದರೆ ಮತ್ತೆ 6 ತಿಂಗಳ ಸಾದಾ ಸಜೆ ವಿಧಿಸಿದ್ದಾರೆ. ಆರೋಪಿ ಪ್ರಸ್ತುತ ಮೂಡುಬಿದಿರೆ ಪುರಸಭೆಯಲ್ಲಿ ಜೂನಿಯರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕ ನವೀನ್‌ಚಂದ್ರ ಜೋಗಿ ತನಿಖೆ ಪೂರ್ಣಗೊಳಿಸಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕಿ ಭಾರತಿ ಜಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.